ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಸಲಹೆಯಂತೆ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಲಿದ್ದಾರೆ.

ಬೆಂಗಳೂರು (ಜು.15): ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ರಾತ್ರಿ 10 ಗಂಟೆಯ ಸುಮಾರಿಗೆ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಉಸಿರಾಟದ ಸಮಸ್ಯೆ:

ಕಳೆದ ಎರಡು ದಿನಗಳಿಂದ ಚೆನ್ನಮ್ಮ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಅವರಿಗೆ ಇಂದು ರಾತ್ರಿ ಸಮಸ್ಯೆ ಹೆಚ್ಚಾದ ಕಾರಣ, ಹೆಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವೈದ್ಯರ ಸಲಹೆ:

ಚೆನ್ನಮ್ಮ ಅವರ ಆರೋಗ್ಯವನ್ನು ಪರೀಕ್ಷಿಸಿರುವ ವೈದ್ಯರು, ಮುಂದಿನ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಗಂಭೀರ ತೊಂದರೆ ಇಲ್ಲ ಎಂದು ವೈದ್ಯಕೀಯ ಮೂಲಗಳು ಸ್ಪಷ್ಟಪಡಿಸಿವೆ. ಮುಂಜಾಗ್ರತಾ ಕ್ರಮವಾಗಿ ವೈದ್ಯರು ಅವರನ್ನು ನಿಗಾದಲ್ಲಿ ಇರಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅವರ ಪುತ್ರ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕುಟುಂಬದ ಇತರ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.