ಬೆಂಗಳೂರು[ಜ.13]: ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ (100) ಅವರು ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದು ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶುಕ್ರವಾರ ರಾತ್ರಿ ಹೃದಯ ಸಮಸ್ಯೆ ಹಾಗೂ ಉಸಿರಾಟ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಕ್ರವಾರ ರಾತ್ರಿ ಎಲ್ಲಾ ಪರೀಕ್ಷೆಗಳನ್ನೂ ನಡೆಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಪ್ರಸ್ತುತ ಆರೋಗ್ಯ ಸ್ಥಿರವಾಗಿದ್ದು, ಸಾಮಾನ್ಯ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ. ಆರೋಗ್ಯ ಸ್ಥಿತಿ ಪರಿಶೀಲಿಸಿ ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌, ಎಚ್‌.ಎಸ್‌.ದೊರೆಸ್ವಾಮಿ ಅವರಿಗೆ ಮೊದಲಿನಿಂದಲೂ ಹೃದಯದ ಒಂದು ವಾಲ್‌್ವನಲ್ಲಿ ಸೋರಿಕೆ ಸಮಸ್ಯೆ ಇದೆ. ಜತೆಗೆ ಕಳೆದ 8-10 ವರ್ಷದಿಂದ ವಯೋ ಸಹಜವಾಗಿ ಅಸ್ತಮಾ, ಅಧಿಕ ರಕ್ತದೊತ್ತಡ ಸೇರಿದಂತೆ ಕೆಲ ಅನಾರೋಗ್ಯ ಸಮಸ್ಯೆ ಇವೆ. ಪ್ರತಿ 2-3 ತಿಂಗಳಿಗೊಮ್ಮೆ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಾರೆ ಎಂದರು.

ಹೃದಯ ಸಮಸ್ಯೆಯಿಂದಾಗಿ ಶುಕ್ರವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು, ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕ ಇಲ್ಲ ಎಂದು ಸ್ಪಷ್ಟಪಡಿಸಿದರು.