ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಗೌರಿ ಗಣೇಶ ಹಬ್ಬದಂದು HMT ಕೈಗಡಿಯಾರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಮೂಲಕ ಯುವಜನರು ನಾಡಿನ ಹೆಮ್ಮೆಯ HMT ವಾಚ್‌ಗಳನ್ನು ಬಳಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದ್ದಾರೆ.
ಬೆಂಗಳೂರು (ಸೆ.06): ಗೌರಿ ಗಣೇಶ ಹಬ್ಬದ ಆಚರಣೆಯ ನಿಮಿತ್ತ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪುತ್ರ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಹೆಚ್‌ಎಂಟಿ ಕೈಗಡಿಯಾರವನ್ನು ಕಟ್ಟಿದ್ದಾರೆ. ಇದರ ಬೆನ್ನಲ್ಲಿಯೇ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರು, ಯುವ ಜನರು ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ HMT ಕೈಗಡಿಯಾರಗಳನ್ನೇ ಕಟ್ಟಬೇಕು ಎಂಬುದು ನನ್ನ ವಿನಂತಿ ಮಾಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ಅವರು, ಹೆಚ್ಎಂಟಿ ಕೈಗಡಿಯಾರ (HMT Watch) ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು. ನಮ್ಮ ತಲೆಮಾರಿನ ಯುವಜನರಿಗೆ HMT ವಾಚ್ ಎಂದರೆ ಅದೊಂದು ದಂತಕಥೆ. ನನ್ನ ಪೂಜ್ಯ ತಂದೆಯವರು ಹಾಗೂ ಕೇಂದ್ರ ಸರಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಗೌರಿಹಬ್ಬದ ದಿನವಾದ ಇಂದು HMT ಕೈಗಡಿಯಾರ ಖರೀದಿಸಿ ನನ್ನ ಕೈಗೆ ಕಟ್ಟಿದರು.
ಕಾಂಗ್ರೆಸ್ ಸರ್ಕಾರ ಬೇಕಂತಲೇ ದರ್ಶನ್ ಕೊಲೆ ಕೇಸಿನ ಫೋಟೋ ರಿಲೀಸ್ ಮಾಡ್ತಿದೆ; ಕೇಂದ್ರ ಸಚಿವ ಜೋಶಿ
ಈ ಸಂದರ್ಭದಲ್ಲಿ HMT ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ್ ಕೋಹ್ಲಿ ಇನ್ನಿತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು. ಇನ್ನು ನಮ್ಮ ನಾಡಿನ ಎಲ್ಲ ಯುವ ಜನರು ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ HMT ಕೈಗಡಿಯಾರಗಳನ್ನೇ ಕಟ್ಟಬೇಕು ಎಂಬುದು ನನ್ನ ವಿನಂತಿ ಮಾಡಿಕೊಳ್ಳುತ್ತೇನೆ. ನಾನು HMT ಕೈಗಡಿಯಾರ ಕಟ್ಟಿದ್ದೇನೆ, ನೀವೂ ಕಟ್ಟಿಕೊಳ್ಳಿ ಎಂದು ಜೆಡಿಎಸ್ ಯೂತ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಲ್ಲಿ ಗಣೇಶ ಮೂರ್ತಿ ವಿತರಣೆ ಮಾಡಲಾಗ್ತಿದೆ. ಹಲವು ವರ್ಷಗಳಿಂದ ತಾಲೂಕು ಅಧ್ಯಕ್ಷರು ಗಣೇಶ ಮೂರ್ತಿ ವಿತರಣೆ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ನಾನೂ ಭಾಗವಹಿಸಿ ಯುವಕರಿಗೆ ಗಣೇಶ ವಿತರಿಸುತ್ತಿದ್ದೇನೆ. ಉಪಚುನಾವಣೆಗೆ ಮುಖಂಡರು, ಕಾರ್ಯಕರ್ತರು ಸಜ್ಜಾಗಬೇಕು. ಈಗಾಗಲೇ ಕ್ಷೇತ್ರದ ಹಲವೆಡೆ ಸಭೆಗಳನ್ನ ಮಾಡಿ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಎಲ್ಲರ ಅಭಿಪ್ರಾಯಗಳನ್ನ ವರಿಷ್ಠರಿಗೆ ತಲುಪಿಸುವ ಕೆಲಸ ಆಗುತ್ತಿದೆ. ಅಂತಿಮ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು. ಆ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ಸಿದ್ಧತೆ ಮಾಡಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: ಸ್ಯಾಂಡಲ್‌ವುಡ್‌ಗೆ ತಪ್ಪಲಿಲ್ವಾ ನಾಗದೋಷ: ಮೊದಲು ನಾಗಭೂಷಣ, ಈಗ ನಾಗಶೇಖರ್ ಕಾರು ಆಕ್ಸಿಡೆಂಟ್!
ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರದ ಬಗ್ಗೆ ಮೊನ್ನೆ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಬಿಜೆಪಿಯ ಹಿರಿಯ ವರಿಷ್ಠರ ಜೊತೆಗೂ ಚರ್ಚೆ ಮಾಡಲಾಗಿದೆ. ಕ್ಷೇತ್ರದಲ್ಲಿ ಆರೋಗ್ಯಕರ ಚುನಾವಣೆ ನಡೆಯಬೇಕು. ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ. ಎನ್‌ಡಿಎ ಮೈತ್ರಿ ಅಭ್ಯರ್ಥಿ ಪರವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ಸೋಲಿಸಲು ಸೂಕ್ತ ಅಭ್ಯರ್ಥಿ ಹಾಕುವ ಕೆಲಸವನ್ನ ಹೈಕಮಾಂಡ್ ಮಾಡುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
