ಬೆಂಗಳೂರು, (ಆ.26):  ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ತೆರವುಗೊಳಿಸಲಾಗಿದ್ದು, ಇದು ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ವಿವಿಧ ಸಂಘಟನೆಗಳು ರಾಜ್ಯದೆಲ್ಲೆಡೆ ಪ್ರತಿಭಟನೆಗಳು ಮಾಡುತ್ತಿವೆ.

ಈ ಸಂಬಂಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕಾಗಿನೆಲೆ ಸ್ವಾಮೀಜಿಗಳ ನಿಯೋಗ ಇಂದು (ಬುಧವಾರ) ಕಾವೇರಿಗ ನಿವಾಸದಲ್ಲಿಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪ್ರತಿಮೆ ನಿರ್ಮಾಣ ವಿವಾದ ಹಾಗೂ ಪ್ರಕ್ಷುಬ್ಧ ಪರಿಸ್ಥಿತಿ ಕುರಿತು ಮಾತುಕತೆ ನಡೆಸಿತು. 

ಶೀಘ್ರದಲ್ಲೇ ರಾಯಣ್ಣ ಪುತ್ಥಳಿ ವಿವಾದ ಇತ್ಯರ್ಥ, ನಮ್ಮ ಮೇಲೆ ಭರವಸೆ ಇಡಿ ಎಂದ ಸಚಿವ ‌ಜಾರಕಿಹೊಳಿ 

ಬಳಿಕ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ,  ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ವಿವಾದವನ್ನು ಪರಿಹರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದರು.

 ಕಾಗಿನೆಲೆ ಗುರುಪೀಠದ ಗುರುಗಳು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೆಳಗಾವಿ ನಗರದಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣ ವಿಚಾರವಾಗಿ ಚರ್ಚೆ ನಡೆಸಲಾಯಿತು. ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ಮಾಡಲು ಸರ್ಕಾರ ಸಿದ್ದವಿದ್ದು, ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಜೊತೆ ಸಿಎಂ ಮಾತನಾಡಿದ್ದಾರೆ. ಹಾಗಾಗಿ ನಾಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ, ಕಾನೂನಾತ್ಮಕವಾಗಿ ಶಾಂತಿಯುತವಾಗಿ ನಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಇನ್ನು ಸಿಎಂ ಭೇಟಿ ಬಳಿಕ ಮಾತನಾಡಿದ ಕಾಗಿನೆಲೆ ಶ್ರೀಗಳಾದ ನಿರಂಜನಾನಂದಪುರಿ ಸ್ವಾಮಿಜಿ, ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ರಾಯಣ್ಣನ ಪುತ್ಥಳಿಯನ್ನು ಮರು ನಿರ್ಮಾಣ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ, ನಾಳೆ ವಿವಿಧ ಸಂಘಟನೆಗಳು, ರಾಯಣ್ಣನ ಅಭಿಮಾನಿಗಳು ಬೆಳಗಾವಿ ಚಲೊ ರ್ಯಾಲಿ ಹಮ್ಮಿಕೊಂಡಿದ್ದಾರೆ. ದಯವಿಟ್ಟು ಎಲ್ಲರೂ ಶಾಂತಿಯುತವಾಗಿ ಪ್ರತಿಭಟನೆ ‌ಮಾಡಬೇಕು. ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಮನವಿ ಮಾಡಿದರು.