HD Kumaraswamy on JDS president :ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ, ತಾವೇ ಅಧ್ಯಕ್ಷರಾಗಿ ಮುಂದುವರೆಯುವುದಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ. ಶೀಘ್ರದಲ್ಲೇ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆಯಾಗಲಿದ್ದು, ಪಕ್ಷದ ಕೋರ್ ಕಮಿಟಿ ಬಗ್ಗೆಯೂ ತಿಳಿಸಿದರು.
ಬೆಂಗಳೂರು (ಅ.24): ಸದ್ಯಕ್ಕೆ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ. ಈ ವಿಷಯ ಚರ್ಚೆಗೆ ಬಂದಿಲ್ಲ. ಈಗ ನಾನೇ ಅಧ್ಯಕ್ಷನಾಗಿದ್ದೇನೆ ಎಂದು ಜೆಡಿಎಸ್‌ನ ಹಾಲಿ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ ಅವರಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ. ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ತಿಳಿಸಿದರು.
ಶೀಘ್ರವೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ
ಸಮನ್ವಯ ಸಮಿತಿ ರಚನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶೀಘ್ರವೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತಿತರ ಬಿಜೆಪಿ ನಾಯಕರು ಬಂದು ಚರ್ಚೆ ಮಾಡಿದ್ದಾರೆ. ಬೆಂಗಳೂರಿಗೆ ಒಂದು, ರಾಜ್ಯಕ್ಕೆ ಒಂದು ಸಮನ್ವಯ ಸಮಿತಿ ರಚನೆ ಬಗ್ಗೆ ತೀರ್ಮಾನ ಆಗಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಅದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
ಮುಂದಿನ ತೀರ್ಮಾನ ಏನು?
ಕೋರ್ ಕಮಿಟಿ ಪುನಃ ರಚನೆ ವಿಚಾರ ಸಂಬಂಧ ಮಾತನಾಡಿ, ಕೋರ್ ಕಮಿಟಿ ಪುನಃ ರಚನೆ ಬಗ್ಗೆ ನಮ್ಮ ಪಕ್ಷದಲ್ಲಿ ಒಂದು ಸಭೆ ಆಗಿದೆ. ಕೋರ್ ಕಮಿಟಿ ಮತ್ತು ಕಾರ್ಪೋರೇಷನ್ ಚುನಾವಣೆ ಸಂಬಂಧ ಪಕ್ಷ ಸಂಘಟನೆಗೆ ಸಮಿತಿ ಮಾಡುವ ನಿರ್ಧಾರ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
