ಕರ್ನಾಟಕದಲ್ಲಿ ಇನ್ನೆರೆಡು ದಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕರ್ನಾಟಕ ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, (ಜುಲೈ.17): ಕರ್ನಾಟಕದಲ್ಲಿ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆ ನದಿ, ಕೆರೆ-ಕಟ್ಟೆಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ. ಈಗಾಗಲೇ ಮಳೆ ಜನರನ್ನು ಸಾಕು ಎನ್ನುವಷ್ಟು ಕಾಡಿದೆ. ಇದೀಗ ಮತ್ತೆ ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು...ರಾಜ್ಯದ ಬಹುತೇಕ ಕಡೆ ಮುಂದಿನ 48 ಗಂಟೆಗಳ ಕಾಲ ಮಳೆ ಸಾಧ್ಯತೆಯಿದ್ದು, ಜುಲೈ 19 ರಿಂದ ರಾಜ್ಯದಲ್ಲಿ ಮಳೆ ಪ್ರಮಾಣದಲ್ಲಿ ಇಳಿಕೆ ಸಾಧ್ಯತೆ ಎಂದು ಹವಾಮಾನ ಮಾಹಿತಿ ನೀಡಿದೆ.
ಕೊಡಗಿನಲ್ಲಿ ಮತ್ತೆ ಪ್ರವಾಹ; ಮತ್ತೆ ಮರುಕಳಿಸಲಿದೆಯಾ 2018ರ ಕರಾಳ ದಿನ..?
ಕರಾವಳಿ ತೀರದಲ್ಲಿ ಗಂಟೆಗೆ 40 ಕಿಲೋ ಮೀಟರ್ ನಿಂದ 50 ಕಿಲೋ ಮೀಟರ್ ವರೆಗೆ ಬಿರುಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತವಾರಣ ನಾಳೆಯವರೆಗೂ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ
ಮುಂದಿನ 48 ಗಂಟೆಗಳು ರಾಜ್ಯದ ಬಹುತೇಕ ಕಡೆ ಮಳೆಯಾಗಲಿದ್ದು, ಮಂಗಳವಾರದಿಂದ ಕೆಲ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ. ನೈಋತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಹಾಗೂ ಹಾಸನ ಜಿಲ್ಲೆಗೆ ಇಂದು ಮತ್ತು ನಾಳೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ
ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಕಲಬುರಗಿ ಜಿಲ್ಲೆಗಳಿಗೆ ಜುಲೈ 18 ರಂದು ಯೆಲ್ಲೊ ಅಲರ್ಟ್ ನೀಡಲಾಗಿದೆ. ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಳವಾಗುವ ಸಾಧ್ಯತೆಯಿದ್ದು, ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40 ಕಿ.ಮೀ ನಿಂದ 50 ಕಿ.ಮೀ ಇದೆ. ಈ ವೇಗವು 48 ಗಂಟೆಗಳ ಅವಧಿಯಲ್ಲಿ 60 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಜನಜೀವನ ಅಸ್ತವ್ಯಸ್ತ
ಕಳೆದ 15 ದಿನಗಳಿಂದ ರಾಜ್ಯ ಹಲವು ಕಡೆ ಮಳೆಯಾಗುತ್ತಲೇ ಇದೆ. ಉತ್ತರ ಕರ್ನಾಟಕದಲ್ಲಿ ಜಿಟಿಜಿಟಿ ಮಳೆಯಾಗುತ್ತಿದ್ರೆ, ಮಲೆನಾಡು, ಕರಾವಳಿ ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿದೆ. ಇದರಿಂದ ಚಿಕ್ಕಮಗಳೂರು, ಕೊಡಗಿನಲ್ಲಿ ಭೂಕುಸಿತ ಉಂಟಾಗಿದೆ. ಅಲ್ಲದೇ ನಾನಾ ಕಡೆ ಮನೆ ಗೋಡೆಗಳು ಕುಸಿದು ಸಾವು-ನೋವುಗಳು ಸಂಭಿಸಿವೆ. ಎಡಬಿಡದೇ ಮಳೆಯಾಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಕೆಲವೆಡೆ ಗಂಜಿಕೇಂದ್ರಗಳನ್ನ ತೆರೆಯಲಾಗಿದೆ.
