ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ 

ಬೆಂಗಳೂರು(ಆ.26): ರಾಜ್ಯದ ಮಲೆನಾಡು ಮತ್ತು ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಲಿದೆ. ಉಳಿದಂತೆ ರಾಜ್ಯದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ.

ಕರಾವಳಿ ಜಿಲ್ಲೆಗೆ ಮಳೆಯ ಯಾವುದೇ ಎಚ್ಚರಿಕೆ ಇರದಿದ್ದರೂ ಸಮುದ್ರ ಭಾಗದಲ್ಲಿ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.

ಮಳೆ ಹಾನಿ ಕಾಮಗಾರಿಗೆ ತುರ್ತು ಅನುದಾನ: ಸಚಿವ ಗೋವಿಂದ ಕಾರಜೋಳ

ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆ ಅವಧಿಯಲ್ಲಿ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿತ್ತು. ಕರಾವಳಿಯ ಬಹುತೇಕ ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಕ್ಯಾಸಲ್‌ ರಾಕ್‌ನಲ್ಲಿ 7 ಸೆಂ. ಮೀ, ಸುಳ್ಯ, ಶಿರಾಲಿ, ಟಿ. ನರಸೀಪುರ, ತಿಪಟೂರು, ಶ್ರವಣಬೆಳಗೊಳ, ಮಂಡ್ಯ, ಹೆಸರಘಟ್ಟದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ.