ದಕ್ಷಿಣ ಒಳನಾಡು, ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾರಾಂತ್ಯದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕ್ಷೀಣಿಸಿದ್ದ ಮುಂಗಾರು ರಾಜ್ಯಾದ್ಯಂತ ಚುರುಕುಗೊಂಡಿದೆ.

ಬೆಂಗಳೂರು (ಆ.06): ದಕ್ಷಿಣ ಒಳನಾಡು, ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾರಾಂತ್ಯದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕ್ಷೀಣಿಸಿದ್ದ ಮುಂಗಾರು ರಾಜ್ಯಾದ್ಯಂತ ಚುರುಕುಗೊಂಡಿದೆ. ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಆ.9ರ ವರೆಗೆ ಮಳೆ ಮುಂದುವರೆಯಲಿದೆ.

Add Asianetnews Kannada as a Preferred SourcegooglePreferred

ಪ್ರಮುಖವಾಗಿ ಕರಾವಳಿ ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಆ.7 ಮತ್ತು 8ಕ್ಕೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಮುಂದಿನ 24 ಗಂಟೆಯಲ್ಲಿ ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್‌ ಅಲರ್ಟ್‌’ ಹಾಗೂ ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಾಮರಾಜನಗರ ಜಿಲ್ಲೆಗಳಿಗೆ ಬುಧವಾರಕ್ಕೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುರುವಾರದಿಂದ ಮಳೆ ಚುರುಕುಗೊಳ್ಳಲಿದ್ದು, ಗದಗ, ಬೀದರ್‌, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಗುರುವಾರಕ್ಕೆ ‘ಯೆಲ್ಲೋ ಅಲರ್ಟ್‌’ ಮುನ್ಸೂಚನೆ ನೀಡಲಾಗಿದೆ. ಗುರುವಾರದಿಂದ ಬೆಂಗಳೂರು ನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

80%ವರೆಗೂ ಮಳೆ ಕೊರತೆ: ಮುಂಗಾರು ಅವಧಿಯ ದ್ವಿತೀಯಾರ್ಧದಲ್ಲಿ ರಾಜ್ಯದಲ್ಲಿ ಭಾರೀ ಮಳೆ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರಸಕ್ತ ಮುಂಗಾರು ಅವಧಿಯ ಮೊದಲಾರ್ಧ ಜುಲೈ ಅಂತ್ಯಕ್ಕೆ ಮುಕ್ತಾಯಗೊಂಡಿದ್ದು, ದ್ವಿತೀಯಾರ್ಧದ ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಿನ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಇದೀಗ ಬಿಡುಗಡೆ ಮಾಡಿದ್ದು, ಒಟ್ಟಾರೆ ದೇಶದಲ್ಲಿ ವಾಡಿಕೆಯ ಮಳೆ ಬಂದರೂ ರಾಜ್ಯದ ಪಾಲಿಗೆ ಮಳೆ ಕೊರತೆಯಾಗುವ ಸಾಧ್ಯತೆ ಎಂದು ತಿಳಿಸಿದೆ.

ಆಗಸ್ಟ್‌ನಲ್ಲಿ ಕರಾವಳಿ, ಮಲೆನಾಡು ಸೇರಿ ರಾಜ್ಯದಲ್ಲಿ ಶೇ.50ರಷ್ಟು ಮಳೆ ಕೊರತೆ ಕಂಡು ಬರಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಈ ಮಳೆ ಕೊರತೆ ಪ್ರಮಾಣ ಶೇ.80ರಷ್ಟು ಇರಲಿದೆ. ಸೆಪ್ಟೆಂಬರ್‌ನಲ್ಲಿ ಒಳನಾಡು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಸುಧಾರಿಸಲಿದೆ. ಆದರೆ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕೊರತೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ ಅಂತ್ಯಕ್ಕೆ ರಾಜ್ಯದಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.11ರಷ್ಟು ಹೆಚ್ಚಾಗಿದೆ. ಕರಾವಳಿಯಲ್ಲಿ ಶೇ.18, ಉತ್ತರ ಒಳನಾಡಿನಲ್ಲಿ ಶೇ.22ರಷ್ಟು ಹೆಚ್ಚಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶೇ.1ರಷ್ಟು ಕೊರತೆ ಕಂಡು ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇ.58ರಷ್ಟು ಮಳೆ ಕೊರತೆ ಉಂಟಾಗಿದೆ. ರಾಮನಗರ ಶೇ.49, ಹಾಸನ ಶೇ.47 ರಷ್ಟು, ಬೆಂಗಳೂರು ನಗರ ಶೇ.36, ಕೋಲಾರ ಶೇ.34, ತುಮಕೂರು ಶೇ.28, ಶಿವಮೊಗ್ಗ ಶೇ.22 ಹಾಗೂ ಚಿಕ್ಕಬಳ್ಳಾಪುರದಲ್ಲಿ ಶೇ.18 ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.