ಸರ್ಕಾರ ಮತ್ತು ಕಾರ್ಮಿಕರ ನಡುವೆ ಸಂಧಾನ ಮುಂದುವರಿಯಲಿ ಎಂದು ಹೈಕೋರ್ಟ್‌ ಸಲಹೆ ನೀಡಿದೆ.

ಬೆಂಗಳೂರು (ಆ.08): ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಲಾಗಿದ್ದ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿ ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳು ಸಲ್ಲಿಸಿದ ಪ್ರಮಾಣ ಪತ್ರವನ್ನು ಪರಿಗಣಿಸಿ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿರುವ ಹೈಕೋರ್ಟ್‌, ಸರ್ಕಾರ ಮತ್ತು ಕಾರ್ಮಿಕರ ನಡುವೆ ಸಂಧಾನ ಮುಂದುವರಿಯಲಿ ಎಂದು ಸಲಹೆ ನೀಡಿದೆ.

ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾಗುವುದರಿಂದ ಮುಷ್ಕರ ನಡೆಸದಂತೆ ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಗೆ ಆದೇಶಿಸುವಂತೆ ಕೋರಿ ಬೆಂಗಳೂರಿನ ಜೆ. ಸುನೀಲ್‌ ಮತ್ತಿತರರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಆ.5ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಸರ್ಕಾರ ಎಸ್ಮಾ ಕಾಯ್ದೆ ಜಾರಿ ಮಾಡಿದ್ದರೂ ಮುಷ್ಕರ ನಡೆಸಿರುವುದು ಅಕ್ರಮವೆಂದು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಜೊತೆಗೆ ಮುಷ್ಕರ ಹಿಂಪಡೆದು ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಬೇಕು.

ಇಲ್ಲವಾದರೆ ಕ್ರಿಯಾ ಸಮಿತಿಯ ಪದಾಧಿಕಾರಿಗಳನ್ನು ಬಂಧಿಸಲು ಆದೇಶಿಸಲಾಗುವುದು ಎಂದು ಎಚ್ಚರಿಕೆ ನೀಡಿ ವಿಚಾರಣೆ ಮುಂದೂಡಿತ್ತು. ಗುರುವಾರ ಅರ್ಜಿ ಮತ್ತೆ ವಿಚಾರಣೆಗೆ ಬಂದಾಗ ಕಾರ್ಮಿಕ ಸಂಘಟನೆಗಳ ಪರ ವಕೀಲರು ಹಾಜರಾಗಿ, ಸದ್ಯ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂದು ಮಾಹಿತಿ ನೀಡಿ, ಆ ಕುರಿತ ನಿರ್ಣಯವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಸರ್ಕಾರದ ಪರ ವಕೀಲರು, ಕಾರ್ಮಿಕರ ಜತೆ ಸಂಧಾನ ಮುಂದುವರಿಯುತ್ತಿದೆ. ಇಂದೂ ಸಹ ಮಾತುಕತೆ ನಡೆದಿದ್ದು, ಆ.28ಕ್ಕೆ ಮತ್ತೆ ಸಂಧಾನ ಸಭೆ ನಡೆಯಲಿದೆ ಎಂದು ತಿಳಿಸಿದರು.

ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್, ಸದ್ಯ ಮುಷ್ಕರ ಹಿಂಪಡೆಯಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಇದೇ ಪರಿಸ್ಥಿತಿ ಮರುಕಳಿಸುವ ಸಾಧ್ಯತೆಯಿದೆ. ಆದ್ದರಿಂದ ಪ್ರಕರಣ ಸಂಬಂಧ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಕಾಲಮಿತಿ ನಿಗದಿಪಡಿಸಿ ಆದೇಶಿಸಬೇಕು ಎಂದು ಕೋರಿದರು. ಸದ್ಯ ಮುಷ್ಕರ ಹಿಂಪಡೆದಿರುವ ಕಾರಣ ಅರ್ಜಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ ವಿಭಾಗೀಯ ಪೀಠ ತಿಳಿಸಿತು.