ಕೋವಿಡ್ ನಿಯಮ ಉಲ್ಲಂಘನೆ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ರಾಜ್ಯಾದ್ಯಂತ ನಡೆದ ಪ್ರತಿಭಟನೆ ಹಾಗೂ ಮುಷ್ಕರದಲ್ಲಿ ಕೋವಿಡ್-19 ಮಾರ್ಗಸೂಚಿ ಉಲ್ಲಂಘಣೆ| ಸಾಮಾಜಿಕ ಕಾರ್ಯಕರ್ತ ಸಾಯಿದತ್ತಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ| ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮ|
ಬೆಂಗಳೂರು(ಅ.16): ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಕೃಷಿ ಮಸೂದೆ ವಿರೋಧಿಸಿ ಕಳೆದ ಸೆ.28ರಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಡೆದ ಪ್ರತಿಭಟನೆ ಹಾಗೂ ಮುಷ್ಕರದಲ್ಲಿ ಕೋವಿಡ್-19 ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲು ಆದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಸಾಯಿದತ್ತಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದತ್ತು. ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಪ್ರತಿವಾದ ಆಲಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿದಾರರು ಎತ್ತಿರುವ ಆಕ್ಷೇಪದ ಬಗ್ಗೆ ವಿವರಣೆ ನೀಡಬೇಕು ಎಂದು ನಿರ್ದೇಶಿಸಿತು.
ಬೆಂಗಳೂರಿಗರೇ ಎಚ್ಚರ: ಮತ್ತೆ ಹೆಚ್ಚಾದ ಕೊರೋನಾ ಸಾವಿನ ಸಂಖ್ಯೆ..!
ಆದರೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಕೃಷಿ ಮಸೂದೆ ವಿರೋಧಿಸಿ ಕಳೆದ ಸೆ.28ರಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರಾಜಕೀಯ ಪಕ್ಷಗಳು, ಕನ್ನಡ ಹಾಗೂ ರೈತ ಪರ ಸಂಘಟನೆಗಳು ನಡೆಸಿದ ಬಂದ್ ಹಾಗೂ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ಪೈಕಿ ಬಹುತೇಕ ಮಂದಿ ಕೋವಿಡ್-19 ಮಾರ್ಗಸೂಚಿ ಪಾಲಿಸಿಲ್ಲ. ಈ ವರ್ತನೆ ಕೊರೋನಾ ಸೋಂಕು ಹೆಚ್ಚಳವಾಗಲು ಕಾರಣವಾಗುವ ಜತೆಗೆ ಜತೆಗೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸರ ಪ್ರಾಣಕ್ಕೂ ಅಪಾಯ ತರಲಿದೆ. ಹೀಗಾಗಿ ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಬೇಕು.ಹೆಚ್ಚು ಜನ ಸೇರಿದ ಜಾಗದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಪಿಪಿಇ ಕಿಟ್ ಪೂರೈಕೆ ಮಾಡಲು ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.