ಸರ್ಕಾರದ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂಬ ಕೋರಿಕೆ ಪುರಸ್ಕರಿಸಿದ ನ್ಯಾಯಪೀಠ, ಎರಡು ವಾರ ಕಾಲಾವಕಾಶ ನೀಡಿ ಅರ್ಜಿ ವಿಚಾರಣೆ ಮುಂದೂಡಿತು.
ಬೆಂಗಳೂರು(ಮೇ.25): ಪರಿಶಿಷ್ಟ ಜಾತಿಗಳನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ, ಒಳ ಮೀಸಲಾತಿ ಹಂಚಿಕೆ ಮಾಡಿ ಬಿಜೆಪಿ ಸರ್ಕಾರ ಮಾಡಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಎರಡು ವಾರ ಕಾಲಾವಕಾಶ ನೀಡಿದೆ. ಬೆಂಗಳೂರಿನ ಎಚ್.ರವಿ ಅವರು ಸಲ್ಲಿಸಿದ್ದ ಅರ್ಜಿ ಬುಧವಾರ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಸರ್ಕಾರದ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂಬ ಕೋರಿಕೆ ಪುರಸ್ಕರಿಸಿದ ನ್ಯಾಯಪೀಠ, ಎರಡು ವಾರ ಕಾಲಾವಕಾಶ ನೀಡಿ ಅರ್ಜಿ ವಿಚಾರಣೆ ಮುಂದೂಡಿತು. ಸಂಪುಟ ಉಪ ಸಮಿತಿಯ ಶಿಫಾರಸ್ಸು ಆಧರಿಸಿ 2023ರ ಮಾ.27ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಮೀಸಲಾತಿ ವರ್ಗೀಕರಿಸಿ ಆದೇಶ ಮಾಡಿದೆ. ಈ ವರ್ಗೀಕರಣವನ್ನು ರಾಜ್ಯಪಾಲರ ಒಪ್ಪಿಗೆಯ ಬಳಿಕ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಿದೆ.
'ಖುಲಾಸೆಗೊಂಡಿದ್ದ' ರೇಪಿಸ್ಟ್‌ಗೆ ಬಿಸಿಮುಟ್ಟಿಸಿದ ಹೈಕೋರ್ಟ್: ಮಹತ್ವದ ಆದೇಶ!
ನಿಕಟಪೂರ್ವ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರ ನೇತೃತ್ವದ ಸಂಪುಟ ಉಪ ಸಮಿತಿಯು 101 ಪರಿಶಿಷ್ಟಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಶೇ.17 ಮೀಸಲಾತಿಯನ್ನು ನಾಲ್ಕು ವರ್ಗಗಳನ್ನಾಗಿ ಪ್ರತ್ಯೇಕಿಸಿ ಮೀಸಲಾತಿ ಹಂಚಿಕೆ ಮಾಡಿದೆ. ಯಾವುದೇ ತತ್ವ ಹಾಗೂ ಹಿಂದುಳಿದಿರುವಿಕೆ ಆಧಾರ ಇಲ್ಲದೆ ಮತ್ತು ಪೂರಕವಾದ ದತ್ತಾಂಶ ಸಂಗ್ರಹಿಸದೆ 101 ಪರಿಶಿಷ್ಟಜಾತಿಗಳನ್ನು ನಾಲ್ಕು ವರ್ಗಗಳಾಗಿ ವಿಂಗಡಿಸಲಾಗಿದೆ. ಇದು ಅತಾರ್ಕಿಕ, ಅವೈಜ್ಞಾನಿಕ ಮತ್ತು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ. ಆದ್ದರಿಂದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
