ಪಿಎಸ್‌ಐ ಅಕ್ರಮ ನೇಮಕಾತಿ: ಎಡಿಜಿಪಿ ಅಮೃತ್ ಪೌಲ್‌ಗೆ ಬೇಲ್
ಅರ್ಜಿದಾರರು ಐದು ಲಕ್ಷ ರು.ಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಜಾಮೀನು ದೊರೆತ ನಂತರವೂ ತನಿಖೆಗೆ ಸಹಕರಿಸಬೇಕು. ಸಾಕ್ಷ್ಯಧಾರಗಳ ನಾಶಕ್ಕೆ ಯತ್ನಿಸಬಾರದು. ಸಾಕ್ಷಿಗಳ ಮತ್ತು ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಬಾರದು. ಕೋರ್ಟ್ ಅನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣ ಬೆಳಸಬಾರದು ಎಂದು ಹೈಕೋರ್ಟ್ ಷರತ್ತು ವಿಧಿಸಿದೆ. ವಿಸ್ತೃತ ಆದೇಶ ಇನ್ನಷ್ಟೆ ಬಿಡುಗಡೆಯಾಗಬೇಕಿದೆ.

ಬೆಂಗಳೂರು(ಸೆ.26): ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮ ಹಗರಣದ ಪ್ರಮುಖ ಆರೋಪಿಯಾದ ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಮಾಜಿ ಎಡಿಜಿಪಿ ಅಮೃತ್ ಪೌಲ್ ಅವರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
ಪ್ರಕರಣ ಸಂಬಂಧ ಕಳೆದ ಜುಲೈನಲ್ಲಿ ಸಿಐಡಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಕಾರಾಗೃಹದಲ್ಲಿದ್ದ ಅಮೃತ್ ಪೌಲ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರ ನ್ಯಾಯಪೀಠ ಈ ಆದೇಶ ಮಾಡಿದೆ.
ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಕ್ರಮಕ್ಕೆ ಕೇಂದ್ರ ಅಸ್ತು
ಅರ್ಜಿದಾರರು ಐದು ಲಕ್ಷ ರು.ಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಜಾಮೀನು ದೊರೆತ ನಂತರವೂ ತನಿಖೆಗೆ ಸಹಕರಿಸಬೇಕು. ಸಾಕ್ಷ್ಯಧಾರಗಳ ನಾಶಕ್ಕೆ ಯತ್ನಿಸಬಾರದು. ಸಾಕ್ಷಿಗಳ ಮತ್ತು ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಬಾರದು. ಕೋರ್ಟ್ ಅನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣ ಬೆಳಸಬಾರದು ಎಂದು ಹೈಕೋರ್ಟ್ ಷರತ್ತು ವಿಧಿಸಿದೆ. ವಿಸ್ತೃತ ಆದೇಶ ಇನ್ನಷ್ಟೆ ಬಿಡುಗಡೆಯಾಗಬೇಕಿದೆ.
ಪ್ರಕರಣದ ಹಿನ್ನೆಲೆ:
ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್ ದಾಖಲಾಗಿತ್ತು. ಇದೇ ಪ್ರಕರಣ ಕುರಿತು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ 2022ರ ರ ಜು.೪ರಂದು ಸಿಐಡಿ ಪೊಲೀಸರಿಂದ ಬಂಧಿತರಾಗಿದ್ದ ಪೌಲ್ ಅವರು ಜು.14ರವರೆಗೆ ಪೊಲೀಸ್ ವಶದಲ್ಲಿದ್ದರು. ನಂತರ ಅವರನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿತ್ತು. ಈ ಪ್ರಕರಣದಲ್ಲಿ 35ನೇ ಆರೋಪಿಯಾಗಿರುವ ಪೌಲ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ 24ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು 2022ರ ನ.4ರಂದು ಆದೇಶಿಸಿತ್ತು. ಇದರಿಂದ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್, ಪಿಎಸ್‌ಐ ನೇಮಕಾತಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ತಿದ್ದಲು ಕಾರಣರಾಗಿದ್ದರು. ಸುಳ್ಳು ದಾಖಲೆಗಳ ಮೂಲಕ ಕಚೇರಿಗೆ ವೈದ್ಯಕೀಯ ರಜೆ ಹಾಕುವ ಮೂಲಕ ಹಗರಣ ನಡೆಯಲು ಕಾರಣವಾಗಿದ್ದರು. ಉತ್ತರ ಪತ್ರಿಕೆಗಳನ್ನು ತಿದ್ದಿದ 2021ರ ಅ.7, 8 ಮತ್ತು 16ರಂದು ವೈದ್ಯಕೀಯ ರಜೆಯಲ್ಲಿ ಇರುವುದಾಗಿ ಹೇಳಿ ಪ್ರಮಾಣ ಪತ್ರ ನೀಡಿದ್ದಾರೆ. ಆದರೆ, ಅವರು ಆ ದಿನಗಳಂದು ತಮ್ಮ ಪ್ರಮಾಣ ಪತ್ರದಲ್ಲಿ ಹೇಳಿರುವ ಯಲಹಂಕ ನ್ಯೂ ಟೌನ್‌ನಲ್ಲಿರುವ ನವಚೇತನ ಆಸ್ಪತ್ರೆಯಲ್ಲಿ ಯಾವುದೇ ಚಿಕಿತ್ಸೆ ಪಡೆದಿಲ್ಲ. ಆಸ್ಪತ್ರೆಯ ದಾಖಲೆಗಳನ್ನು ಪರಿಶೀಲನೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಅಂತೆಯೇ, ಆ ದಿನಗಳಲ್ಲಿ ಸ್ಟ್ರಾಂಗ್ ರೂಮ್ ಬೀಗಗಳನ್ನು ತಮ್ಮ ವೈಯಕ್ತಿಕ ಕೊಠಡಿಯಲ್ಲಿರಿಸಿದ್ದರು. ಅಲ್ಲಿಂದ ಬೇರೆಯವರಿಗೆ ಹಸ್ತಾಂತರ ಮಾಡಿದ್ದಾರೆ ಎಂಬುದು ಪ್ರಾಸಿಕ್ಯೂಷನ್‌ನ ಆರೋಪವಾಗಿದೆ.