ರಾಜ್ಯ ಮಟ್ಟದ ಅನುಷ್ಠಾನ ಪ್ರಾಧಿಕಾರಕ್ಕೆ ಎಚ್.ಎಂ. ರೇವಣ್ಣ ಅವರನ್ನು ಅಧ್ಯಕ್ಷರನ್ನಾಗಿ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದು, ಆದೇಶ ಹೊರ ಬೀಳುವುದು ಬಾಕಿ ಇದೆ. ಅಧ್ಯಕ್ಷ ಹುದ್ದೆ ಕ್ಯಾಬಿನೆಟ್ ದರ್ಜೆ ಹೊಂದಿದೆ. 

ಬೆಂಗಳೂರು(ಫೆ.29): ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ರಚಿಸಿರುವ ರಾಜ್ಯಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಲು ವಿಧಾನಸಭೆ ಮಾಜಿ ಸೀಕರ್ ಕೆ.ಆರ್. ರಮೇಶ್ ಕುಮಾರ್ ನಿರಾಕರಿಸಿರುವ ಹಿನ್ನೆಲೆಯಲ್ಲಿ, ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. 

ಜ.25ರಂದು ರಾಜ್ಯ ಸರ್ಕಾರವು ರಾಜ್ಯಮಟ್ಟದ ಗ್ಯಾರಂಟಿಗಳ ಅನುಷ್ಠಾನ ಪ್ರಾಧಿಕಾರ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಬಿಬಿಎಂಪಿ ಮಟ್ಟದಲ್ಲಿ 'ಬಿಬಿಎಂಪಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ' ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಅಭಿವೃದ್ಧಿ ಶೂನ್ಯ ಗ್ಯಾರಂಟಿ ಕಾಂಗ್ರೆಸ್‌ ಸರ್ಕಾರ: ಬಿ.ವೈ.ವಿಜಯೇಂದ್ರ ಆರೋಪ

ಈ ರಾಜ್ಯ ಮಟ್ಟದ ಅನುಷ್ಠಾನ ಪ್ರಾಧಿಕಾರಕ್ಕೆ ಎಚ್.ಎಂ. ರೇವಣ್ಣ ಅವರನ್ನು ಅಧ್ಯಕ್ಷರನ್ನಾಗಿ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದು, ಆದೇಶ ಹೊರ ಬೀಳುವುದು ಬಾಕಿ ಇದೆ. ಅಧ್ಯಕ್ಷ ಹುದ್ದೆ ಕ್ಯಾಬಿನೆಟ್ ದರ್ಜೆ ಹೊಂದಿದೆ. ಉಳಿದಂತೆ ಉಪಾಧ್ಯಕ್ಷ ಹುದ್ದೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೆಹರೋಜ್ ಖಾನ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾದ ಪುಷ್ಪಾ ಅಮರನಾಥ್, ನಾಯಕರಾದ ಎಸ್.ಆರ್. ಪಾಟಿಲ್, ಸೂರಜ್ ಹೆಗ್ಡೆ ಅವರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.