ಮಹಿಳೆಯರ ಮೇಲಿನ ಅತ್ಯಾಚಾರ ಸೇರಿದಂತೆ ಅಪರಾಧ ಕೃತ್ಯಗಳಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಂತಹ ಪ್ರಕರಣಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡಬೇಕು. ಕೊರೋನಾ ನಿಯಂತ್ರಿಸುವಲ್ಲಿ ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ಅಗತ್ಯ ಸಹಕಾರ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಬೊಮ್ಮಾಯಿ

ಬೆಂಗಳೂರು(ಅ.10): ರಾಜ್ಯದಲ್ಲಿ ಮಾದಕ ವಸ್ತು ಮಾರಾಟ ವಿರುದ್ಧ ಕಾರ್ಯಾಚರಣೆ ಕುರಿತು ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಶುಕ್ರವಾರ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ.

ಶುಕ್ರವಾರ ವಿಡಿಯೋ ಕಾನ್ಫೆರನ್ಸ್‌ ಮೂಲಕ ಎಲ್ಲ ನಗರಗಳ ಆಯುಕ್ತರು, ಐಜಿಪಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಸಚಿವರು, ಡ್ರಗ್ಸ್‌ ಮಾಫಿಯಾ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸುವಂತೆ ಸೂಚಿಸಿದರು.

"

ಡ್ರಗ್ಸ್‌ ಮಾಫಿಯಾ ವಿರುದ್ಧ ಕಾರ್ಯಾಚರಣೆ ಕೇಂದ್ರ ಹಾಗೂ ರಾಜ್ಯದ ತನಿಖಾ ಸಂಸ್ಥೆಗಳ ಜತೆ ಸಮನ್ವಯತೆಯಿಂದ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದ ಸಚಿವರು, ಎಷ್ಟೇ ಪ್ರಭಾವಿಗಳು ದಂಧೆಯಲ್ಲಿ ಭಾಗಿಯಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಮತ್ತು ನಿಷ್ಪಕ್ಷಪಾತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಆದೇಶಿಸಿದರು.

ಗೃಹ ಸಚಿವ ಬೊಮ್ಮಾಯಿ ತವರೂರಲ್ಲಿ ಪೊಲೀಸ್‌ ಕಮಿಷನರೇಟ್‌ನಲ್ಲಿ ಅಧಿಕಾರಿಗಳ ತಿಕ್ಕಾಟ!

ಇದೇ ವೇಳೆ ಮಹಿಳಾ ಸುರಕ್ಷತೆ ಬಗ್ಗೆ ಸಮಾಲೋಚಿಸಿದ ಸಚಿವರು, ಮಹಿಳೆಯರ ಮೇಲಿನ ಅತ್ಯಾಚಾರ ಸೇರಿದಂತೆ ಅಪರಾಧ ಕೃತ್ಯಗಳಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಂತಹ ಪ್ರಕರಣಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡಬೇಕು. ಕೊರೋನಾ ನಿಯಂತ್ರಿಸುವಲ್ಲಿ ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ಅಗತ್ಯ ಸಹಕಾರ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಭೆಯಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಹಾಗೂ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ ) ಅಮರ್‌ ಕುಮಾರ್‌ ಪಾಂಡೆ ಇದ್ದರು.