ಬೆಳಗಾವಿ ಚಳಿಗಾಲದ ಅಧಿವೇಶನದ ಭದ್ರತೆಗೆ 6,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಜೊತೆಗೆ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15,000 ಪೇದೆ ಮತ್ತು 600 ಪಿಎಸ್‌ಐ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಅವರು ಘೋಷಿಸಿದ್ದಾರೆ.
ಬೆಳಗಾವಿ (ನ.26) ಮುಂಬರುವ ಚಳಿಗಾಲದ ಅಧಿವೇಶನದ ಭದ್ರತಾ ಸಿದ್ಧತೆಗಳ ಕುರಿತು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಇಂದು ಬೆಳಗಾವಿ ಎಸ್‌ಪಿ ಕಚೇರಿಯಲ್ಲಿ ಉತ್ತರ ವಲಯದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಅಧಿವೇಶನದ ಸಂದರ್ಭದಲ್ಲಿ ಎದುರಾಗಬಹುದಾದ ಪ್ರತಿಭಟನೆಗಳು ಮತ್ತು ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಸಮಾಲೋಚನೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.
ಚಳಿಗಾಲದ ಅಧಿವೇಶನದ ಭದ್ರತೆಗೆ 6,000 ಪೊಲೀಸ್ ಸಿಬ್ಬಂದಿ!
ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ, ಒಟ್ಟು 6,000 ಪೊಲೀಸ್ ಸಿಬ್ಬಂದಿಯನ್ನು ಚಳಿಗಾಲದ ಅಧಿವೇಶನದ ಭದ್ರತೆಗಾಗಿ ನಿಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು. ರೈತರು, ಎಂಇಎಸ್ ಕಾರ್ಯಕರ್ತರು, ಮೀಸಲಾತಿ ಹಾಗೂ ವಿವಿಧ ಬೇಡಿಕೆಗಳಿಗಾಗಿ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿರುವುದರಿಂದ ಅವುಗಳನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ. ಸಿಬ್ಬಂದಿಗೆ ಊಟ, ವಸತಿ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಪೊಲೀಸ್ ಇಲಾಖೆಯ ಖಾಲಿ ಹುದ್ದೆಗಳು ಶೀಘ್ರ ಭರ್ತಿ?
ಇದೇ ವೇಳೆ, ಪೊಲೀಸ್ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯ ಕುರಿತು ಗೃಹ ಸಚಿವರು ಮಹತ್ವದ ಹೇಳಿಕೆಗಳನ್ನು ನೀಡಿದರು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 70,000 ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ. ಪೊಲೀಸ್ ಇಲಾಖೆಯಲ್ಲಿ ಒಳ ಮೀಸಲಾತಿ ಕಾರಣದಿಂದ ವಿಳಂಬವಾಗಿದ್ದ ನೇಮಕಾತಿ ಸಮಸ್ಯೆ ಈಗ ನಿವಾರಣೆಯಾಗಿದೆ. ಈಗಾಗಲೇ ನೇಮಕಾತಿಯಾದ 545 ಸಬ್ ಇನ್ಸ್‌ಪೆಕ್ಟರ್‌ಗಳ ತರಬೇತಿ ಮುಗಿಯುವ ಹಂತದಲ್ಲಿದೆ. ಜೊತೆಗೆ, ಇನ್ನೂ 600 ಖಾಲಿ ಇರುವ ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇಲಾಖೆಯಲ್ಲಿ ಸುಮಾರು 15 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲಾಗುತ್ತದೆ. ನೇಮಕಾತಿ ಆಕಾಂಕ್ಷಿಗಳಿಗೆ ಎರಡು ವರ್ಷಗಳ ವಯೋಮಿತಿ ವಿನಾಯಿತಿ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಪೊಲೀಸರ ಕಾರ್ಯದ ಬಗ್ಗೆ ಗೃಹ ಸಚಿವ ಮೆಚ್ಚುಗೆ:
ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಗ್ಯಾಂಬ್ಲಿಂಗ್, ಮಟ್ಕಾ ಸೇರಿದಂತೆ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಲು ನಮ್ಮ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ನಮ್ಮ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ, ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ, ಕಬ್ಬು, ಮೆಕ್ಕೆಜೋಳ ಸೇರಿದಂತೆ ರೈತರ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಕ್ರಮವಹಿಸುತ್ತದೆ ಎಂದು ಅವರು ಭರವಸೆ ನೀಡಿದರು.


