ಬೆಂಗಳೂರು[ಅ.24]:  ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಿರುವುದರಿಂದ ಯೋಜನೆಯನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳಸಾ-ಬಂಡೂರಿ ನಾಲಾ ಯೊಜನೆ ಪ್ರಾರಂಭಿಸಲು ಕೇಂದ್ರ ಪರಿಸರ ಇಲಾಖೆ ಅನುಮತಿ ಕ್ಟೊಟಿದೆ. ಇದರಿಂದ ಯೋಜನೆಯ ಅನುಷ್ಠಾನಕ್ಕೆ ಶೇ.90ರಷ್ಟುದಾರಿ ಸುಗಮವಾಗಿದೆ. ಪರಿಸರ ಇಲಾಖೆ ನೀಡಿರುವ ಅನುಮತಿ ವಿಚಾರವನ್ನು ಸುಪ್ರೀಂಕೋರ್ಟ್‌ ಗಮನಕ್ಕೆ ತಂದು ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಳಸಾ ಬಂಡೂರಿ ನಾಲಾ ಯೋಜನೆಯನ್ನು ಆರಂಭಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ನೀಡಿದ ಆಶ್ವಾಸನೆಯಂತೆ ಇದೀಗ ಕೇಂದ್ರ ಪರಿಸರ ಇಲಾಖೆ ಯೋಜನೆ ಪ್ರಾರಂಭಿಸಲು ಯಾವುದೇ ತಕರಾರು ಇಲ್ಲ ಎಂದು ಹೇಳಿದೆ. ಇದರಿಂದ ಯೋಜನೆಗೆ ಎದುರಾಗಿದ್ದ ತೊಡಕುಗಳು ನಿವಾರಣೆಯಾದಂತಾಗಿವೆ ಎಂದು ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಜ್ಯದಲ್ಲಿ ಮತ್ತೆ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಸಂತ್ರಸ್ತರ ರಕ್ಷಣೆಗೆ ಸಮರೋಪಾದಿಯಲ್ಲಿ ಕೆಲಸ ನಡೆಯುತ್ತಿದೆ. ಸರ್ಕಾರ ಕೈ ಕಟ್ಟಿಕುಳಿತುಕೊಳ್ಳದೆ ಪರಿಹಾರ ಕಾರ್ಯವನ್ನು ಕೈಗೊಂಡಿದೆ. ಹಿಂದಿನ ಪ್ರವಾಹ ಪರಿಸ್ಥಿತಿ ಉಂಟಾಗಿದ್ದ ಘಟನೆ ಸಂಬಂಧ ಶೀಘ್ರದಲ್ಲಿಯೇ ಕೇಂದ್ರದಿಂದ ಮತ್ತಷ್ಟುಪರಿಹಾರ ಸಿಗುವ ಭರವಸೆ ಇದೆ. ಪ್ರಸ್ತುತ ಉಂಟಾಗಿರುವ ಹಾನಿಯ ಕುರಿತು ಜಿಲ್ಲಾಧಿಕಾರಿಗಳು ನೀಡುವ ವರದಿಯನ್ನು ಅಂತಿಮಗೊಳಿಸಿ ಕೇಂದ್ರಕ್ಕೆ ಮತ್ತಷ್ಟುಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗುವುದು ಎಂದರು.