ಕರ್ನಾಟಕದಲ್ಲಿ 400 ಪಶುವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲದೆ, ರಾಜ್ಯದ ಅಂಗನವಾಡಿಗಳಲ್ಲಿ ಖಾಲಿಯಾದ ಹುದ್ದೆಗಳನ್ನು 90 ದಿನಗಳೊಳಗೆ ಭರ್ತಿ ಮಾಡಲು ಸೂಚನೆ ನೀಡಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.

ವಿಧಾನ ಪರಿಷತ್‌: ಕರ್ನಾಟಕ ಲೋಕಸೇವಾ ಆಯೋಗದಿಂದ 400 ಪಶುವೈದ್ಯಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆ ಆರ್ಥಿಕ ಇಲಾಖೆಯ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್‌ ತಿಳಿಸಿದರು. ಬಿಜೆಪಿಯ ಡಿ.ಎಸ್‌.ಅರುಣ್‌, ಹೇಮಲತಾ ನಾಯಕ್‌ ಹಾಗೂ ಎಸ್‌.ವಿ.ಸಂಕನೂರು ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2024-25ನೇ ಸಾಲಿನಲ್ಲಿ 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿದ್ದು, ಪ್ರಸ್ತುತ 367 ಪಶು ವೈದ್ಯಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಖಾಲಿ ಇರುವ ಪಶು ವೈದ್ಯಕೀಯ ಸಂಸ್ಥೆಗಳಿಗೆ ಪಶು ವೈದ್ಯರನ್ನು ಅಧಿಕ ಪ್ರಭಾರದಲ್ಲಿ ಇರಿಸಿ ಜಾನುವಾರುಗಳಿಗೆ ಚಿಕಿತ್ಸಾ ಸೌಲಭ್ಯ ಕೊಡಲಾಗುತ್ತಿದೆ ಎಂದರು. ಮೊಬೈಲ್‌ ವೆಟರನರಿ ಘಟಕಗಳು ಕೇಂದ್ರದ ಯೋಜನೆಯಡಿ ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಕಾರ್ಯನಿರ್ವಹಿಸುತ್ತಿದೆ, ಇವುಗಳ ರಾತ್ರಿ ಸಹ ಕಾರ್ಯ ನಿರ್ವಹಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

Add Asianetnews Kannada as a Preferred SourcegooglePreferred

ಅಂಗನವಾಡಿಗಳ ಹುದ್ದೆ ಖಾಲಿಯಾದ 90 ದಿನದ ಒಳಗೆ ಭರ್ತಿಗೆ ಸೂಚನೆ

ವಿಧಾನಸಭೆ: ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳೊಳಗೆ ಭರ್ತಿ ಮಾಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಗುರ್ಮೆ ಸುರೇಶ್‌ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಯ್ಕೆ ಮಾಡುವಾಗ ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆ. ಆ ಊರಿನ ನಿವಾಸಿಗಳು ಇಲ್ಲದಿದ್ದರೆ, ಗ್ರಾಮ ಪಂಚಾಯಿತಿ ಅಥವಾ ಹೋಬಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರೂ ಅಂತಹ ಅಭ್ಯರ್ಥಿಗಳನ್ನು ಪರಿಗಣಿಸುವುದಾಗಿ ಸಚಿವರು ಮಾಹಿತಿ ನೀಡಿದರು.

ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಹುದ್ದೆ ಖಾಲಿ

ಉಡುಪಿ ಜಿಲ್ಲೆಯಲ್ಲಿ 26 ಅಂಗನವಾಡಿ ಕಾರ್ಯಕರ್ತೆಯರು ಹಾಗು 132 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 16 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 131 ಅಂಗನವಾಡಿ ಸಹಾಯಕಿ ಹುದ್ದೆಗಳ ಆನ್‌ಲೈನ್‌ ನೇಮಕಾತಿ ಪ್ರಕ್ರಿಯೆಯೂ ಅಂತಿಮ ಹಂತದಲ್ಲಿದ್ದು, ಜಿಲ್ಲಾಮಟ್ಟದ ಆಯ್ಕೆ ಸಮಿತಿ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿ ಹೊರಡಿಸಲಾಗಿದೆ. ವಾರದೊಳಗೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.