ಬೆಂಗಳೂರು[ಫೆ.06]: ಬಜೆಟ್‌ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಪ್ರದೇಶದಲ್ಲಿ ನಿಷೇಧಾಜ್ಞೆ ವಿಧಿಸಿ ಪೊಲೀಸ್‌ ಆಯುಕ್ತ (ಪ್ರಭಾರ) ಅಲೋಕ್‌ ಕುಮಾರ್‌ ಅವರು ಆದೇಶ ಹೊರಡಿಸಿದ್ದು, ಬಿಗಿ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದೆ.

ಬಜೆಟ್‌ ಅಧಿವೇಶನದ ಮೊದಲ ದಿನ ರಾಜಕೀಯ ಹೈಡ್ರಾಮಾಗಳು ನಡೆಯುವ ಸಾಧ್ಯತೆ ಹಾಗೂ ಪ್ರಮುಖ ನಾಯಕರ ಬೆಂಬಲಿಗರು ವಿಧಾನಸೌಧದತ್ತ ಬರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ.

ಹೆಚ್ಚುವರಿ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಒಬ್ಬ ಡಿಸಿಪಿ, 10 ಎಸಿಪಿ, 20 ಇನ್ಸ್‌ಪೆಕ್ಟರ್‌ ಹಾಗೂ 300 ಕಾನ್ಸ್‌ಟೇಬಲ್‌, ಹೆಡ್‌ಕಾನ್ಸ್‌ಟೇಬಲ್‌ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಇನ್ನು ಫೆ.6ರ ಬೆಳಗ್ಗೆ ಆರು ಗಂಟೆಯಿಂದ ಫೆ.8ರ ಮಧ್ಯರಾತ್ರಿ 12 ಗಂಟೆವರೆಗೆ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ. ಕಾನೂನುಭಂಗ ಉಂಟುಮಾಡುವ ಉದ್ದೇಶದಿಂದ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆ ನಡೆಸುವುದು, ಶಸ್ತ್ರ, ಮಾರಕಾಸ್ತ್ರ, ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ವ್ಯಕ್ತಿಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆ ಕೂಗುವುದು, ಸಂಜ್ಞೆ ಮಾಡುವುದು, ಭಿತ್ತಿ ಪತ್ರ ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.