ರಾಜ್ಯಾದ್ಯಂತ ₹20,000 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸಂಪುಟ ಅನುಮೋದನೆ. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ನಡುವೆ 3,986 ಕಿ.ಮೀ. ರಸ್ತೆ ಅಭಿವೃದ್ಧಿ ₹6,000 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ಸಭೆ ತೀರ್ಮಾನ.

ಬೆಂಗಳೂರು: ರಾಜ್ಯಾದ್ಯಂತ ರಾಜ್ಯ ಹೆದ್ದಾರಿ, ಜಿಲ್ಲಾ ಪ್ರಮುಖ ರಸ್ತೆಗಳು, ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳ ನಡುವೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸೇರಿ ಬರೋಬ್ಬರಿ 20,000 ಕೋಟಿ ರು. ವೆಚ್ಚದಲ್ಲಿ ವಿವಿಧ ರಸ್ತೆ ಹಾಗೂ ಸೇತುವೆ ನಿರ್ಮಾಣ ಹಾಗೂ ಅಭಿವೃದ್ಧಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಎರಡು ತಿಂಗಳಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆ ನಡೆಸಲು ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ, ಜಿಪಂ ಹಾಗೂ ತಾಪಂ ಮಟ್ಟದ ರಸ್ತೆಗಳ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಆದ್ಯತೆ ನೀಡಿರುವುದು ಕುತೂಹಲ ಮೂಡಿಸಿದೆ. 20,000 ಕೋಟಿ ರು. ವೆಚ್ಚದ ಅಭಿವೃದ್ಧಿ ಯೋಜನೆಯಲ್ಲಿ ಜಿಲ್ಲಾ ಕೇಂದ್ರದಿಂದ ಜಿಲ್ಲಾ ಕೇಂದ್ರ, ಜಿಲ್ಲಾ ಕೇಂದ್ರದಿಂದ ತಾಲೂಕು ಕೇಂದ್ರ ಮತ್ತು ತಾಲೂಕು ಕೇಂದ್ರದಿಂದ ತಾಲೂಕು ಕೇಂದ್ರಕ್ಕೆ ರಸ್ತೆ ಕಲ್ಪಿಸುವ 3,986 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿಯನ್ನು 6,000 ಕೋಟಿ ರು. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ.

ಈ ಬಗ್ಗೆ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್‌ ಖಂಡ್ರೆ, ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ವ್ಯಾಪ್ತಿಯಲ್ಲಿ 6,000 ಕೋಟಿ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ತೀರ್ಮಾನಿಸಲಾಗಿದೆ. ಇದೇ ವೇಳೆ 6,000 ಕೋಟಿ ರು. ವೆಚ್ಚದಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರಸ್ತೆ, ಸೇತುವೆ ಹಾಗೂ ಕಟ್ಟಡ ಕಾಮಗಾರಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಜತೆಗೆ 3,000 ಕೋಟಿ ರು. ಹೆಚ್ಚುವರಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ 5ನೇ ಹಂತ 2ನೇ ಘಟ್ಟದಲ್ಲಿ 1,897 ಕಿ.ಮೀ. ಉದ್ದದ ರಸ್ತೆಗಳ ಅಭಿವೃದ್ಧಿಗೆ ಅನುಮೋದನೆ ನೀಡಲಾಗಿದೆ. ಇದು 2017ರಲ್ಲಿ ಅನುಮೋದನೆಯಾಗಿದ್ದ ಯೋಜನೆಯಾಗಿದ್ದು, 2018ರಲ್ಲಿ ಕಾಮಗಾರಿ ಶುರುವಾಗಿತ್ತು. 5ನೇ ಹಂತದ ರಸ್ತೆಗೆ ಗುರುವಾರ ಅನುಮೋದನೆ ನೀಡಲಾಗಿದೆ. ಇದಕ್ಕೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಎಂದು ಖಂಡ್ರೆ ಮಾಹಿತಿ ನೀಡಿದರು.

3,409 ಕೋಟಿ ಪರಿಷ್ಕೃತ ವೆಚ್ಚದಲ್ಲಿ ರಸ್ತೆ ಅಭಿವೃದ್ದಿ:

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ಸುತ್ತಮುತ್ತಲಿನ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು 10 ಪ್ಯಾಕೇಜ್‌ ಗಳಲ್ಲಿ ಕೈಗೊಳ್ಳಲು 3,409.02 ಕೋಟಿ ರು. ಪರಿಷ್ಕೃತ ಅಂದಾಜು ವೆಚ್ಚಕ್ಕೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ಮತ್ತು ಬೆಂಗಳೂರು ನಗರದ ರಸ್ತೆ ಜಾಲ ಬಲಪಡಿಸಲು ಈ ಯೋಜನೆ ಪೂರಕವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಬೆಂಗಳೂರು ಸುತ್ತಮುತ್ತಲಿನ 155 ಕಿ.ಮೀ. ರಸ್ತೆಗಳ ಅಭಿವೃದ್ಧಿ ಕಾಮಗಾರಿಯನ್ನು ಇ.ಪಿ.ಸಿ. ಮಾದರಿಯಲ್ಲಿ 2,095 ಕೋಟಿ ರು. ಗಳಲ್ಲಿ ಕೈಗೆತ್ತಿಕೊಳ್ಳಲು 2017ರಲ್ಲೇ ಅನುಮೋದನೆ ನೀಡಲಾಗಿತ್ತು. ಈ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು 2019ರಲ್ಲಿ ಪ್ರಾರಂಭಿಸಲಾಗಿದ್ದು, ಪರಿಷ್ಕೃತ 142.27 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪೈಕಿ 121.78 ಕಿ.ಮೀ. ರಸ್ತೆ ಪೂರ್ಣಗೊಂಡಿದೆ ಎಂದೂ ವಿವರಿಸಿದರು.

ಇದಲ್ಲದೆ ಭದ್ರಾವತಿ ವಿಧಾನಸಭಾ ಕ್ಷೇತ್ರದ ನಗರಸಭೆ ವ್ಯಾಪ್ತಿಯಲ್ಲಿ 42 ಕೋಟಿ ರು. ವೆಚ್ಚದಲ್ಲಿ ಕೆಎಸ್‌ಆರ್ಟಿಸಿ ಬಸ್ಸು ನಿಲ್ದಾಣದಿಂದ ಸಿದ್ದಾರೂಢ ನಗರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯ ಪುನರ್‌ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.

ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಾಜ್ಯ ಹೆದ್ದಾರಿ 125ರಲ್ಲಿ ಬೆಣ್ಣೆತೊರಾಗೆ ಅಡ್ಡಲಾಗಿ ಕನ್ಸೂರು ಬಳಿ 21 ಕೋಟಿ ರು. ವೆಚ್ಚದಲ್ಲಿ ಎತ್ತರಿಸಿದ ರಸ್ತೆ ಹಾಗೂ ಸೇತುವೆ ನಿರ್ಮಾಣ, ಶಿವಮೊಗ್ಗ ನಗರದಲ್ಲಿರುವ ಬಾಗಲಕೋಟೆ-ಬಿಳಿರಂಗನ ಬೆಟ್ಟ ರಾಜ್ಯ ಹೆದ್ದಾರಿ 57ರಲ್ಲಿ ಶಿಥಿಲಗೊಂಡಿರುವ ತುಂಗಾ ಸೇತುವೆಯನ್ನು 40 ಕೋಟಿ ರು. ವೆಚ್ಚದಲ್ಲಿ ಮರು ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಅನುದಾನ ಕೊರತೆಯಿಲ್ಲ: ಖಂಡ್ರೆ

ರಾಜ್ಯದ ಹಣಕಾಸು ಪರಿಸ್ಥಿತಿ ಸುಭದ್ರವಾಗಿದೆ. ನಿರೀಕ್ಷೆಗೆ ತಕ್ಕಂತೆ ಜಿಎಸ್ಟಿ ಸೇರಿ ಲಭ್ಯ ಆದಾಯ ಮೂಲಗಳಿಂದ ಆದಾಯ ಬರುತ್ತಿದೆ. ಹೀಗಾಗಿ ಯಾವುದೇ ರೀತಿಯಲ್ಲೂ ಆರ್ಥಿಕ ಸಮಸ್ಯೆ ಇಲ್ಲ. 20,000 ಕೋಟಿ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಹಣಕಾಸು ಇಲಾಖೆಯೂ ಅನುಮೋದನೆ ನೀಡಿದೆ ಎಂದು ಸಚಿವ ಈಶ್ವರ್ ಖಂಡ್ರೆ ಸಮರ್ಥನೆ ನೀಡಿದರು.

ಎಲ್ಲಿ? ಏನೇನು? ಕಾಮಗಾರಿ

ಜಿಲ್ಲಾ ಕೇಂದ್ರಗಳ ನಡುವೆ, ಜಿಲ್ಲಾ ಕೇಂದ್ರದಿಂದ ತಾಲೂಕಿಗೆ, ತಾಲೂಕು- ತಾಲೂಕು ರಸ್ತೆ ಅಭಿವೃದ್ಧಿ

3986 ಕಿ.ಮೀ. ಉದ್ದದ ಈ ರಸ್ತೆಗಳನ್ನು 6,000 ಕೋಟಿ ರು. ವೆಚ್ಚದಲ್ಲಿ ಅಭಿವೃದ್ದಿಪಡಿಸಲು ನಿರ್ಧಾರ

ವಿವಿಧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರಸ್ತೆ, ಸೇತುವೆ, ಕಟ್ಟಡ ಕಾಮಗಾರಿಗೆ ₹6000 ಕೋಟಿ

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ 5ನೇ ಹಂತದಲ್ಲಿ 1897 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿಗೆ ಓಕೆ

ಬೆಂಗಳೂರು ಸುತ್ತಮುತ್ತಲ ರಸ್ತೆ ಅಭಿವೃದ್ಧಿ ಕೆಲಸಕ್ಕೆ ₹3409 ಕೋಟಿ ರು. ಪರಿಷ್ಕೃತ ಅಂದಾಜಿಗೂ ಸಮ್ಮತಿ