ಕೋವಿಡ್ ವಿರುದ್ಧ ಹೋರಾಟದ ಬಗ್ಗೆ  ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಬಿಎಸ್ ಯಡಿಯೂರಪ್ಪ ಏನೆಲ್ಲಾ ಮಾಹಿತಿ ಕೊಟ್ರು? ಈ ಕೆಳಿನಂತಿವೆ ವಿಡಿಯೋ ಕಾನ್ಫರೆನ್ಸ್‌ ಸಭೆಯ ಮುಖ್ಯಾಂಶಗಳು

ಬೆಂಗಳೂರು, 9ಜೂನ್.17): ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಸೇರಿದಂತೆ ಇಂದು (ಬುಧವಾರ) 15 ರಾಜ್ಯಗಳ ಸಿಎಂ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಕೊರೋನಾ ಸ್ಥಿತಿಗತಿ ಕುರಿತು ಮಾಹಿತಿ ಪಡೆದುಕೊಂಡರು.

Add Asianetnews Kannada as a Preferred SourcegooglePreferred

ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ವಿವಿಧ ರಾಜ್ಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೊರೋನಾ ನಿಯಂತ್ರಣದೊಂದಿಗೆ ಆರ್ಥಿಕ ಚಟುವಟಿಕೆಗಳ ಪುನಶ್ಚೇತನಕ್ಕೆ ಒತ್ತು ನೀಡುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. 

ದೇಶದಲ್ಲಿ ಒಂದೇ ದಿನ 8122 ಮಂದಿಗೆ ಕೊರೋನಾ, 10400 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್!

ರಾಜ್ಯಗಳು ಇನ್ನು ಅನ್ ಲಾಕ್ ನತ್ತ ಹೆಜ್ಜೆಯಿಡಬೇಕು. ನಿರ್ಬಂಧ ಕಡಿಮೆಯಾಗಿ, ಚಟುವಟಿಕೆಗಳು ಚುರುಕಾಗಲಿ ಎಂದು ಸಲಹೆ ನೀಡಿದರು. ಆತ್ಮನಿರ್ಭರ್ ಪ್ಯಾಕೇಜ್ ಆರ್ಥಿಕ ಚಟುವಟಿಕೆ ಚುರುಕುಗಾಗಲು ನೆರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿ, ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಅದರ ಪ್ರಮುಖಾಂಶಗಳು ಈ ಕೆಳಗಿನಂತಿವೆ.

ಮೋದಿಗೆ ಬಿಎಸ್‌ವೈ ಕೊಟ್ಟಿರುವ ಮಾಹಿತಿಯ ಮುಖ್ಯಾಂಶಗಳು

* ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಕೈಗೊಂಡಿರುವ 5 ಟಿ ತತ್ವವನ್ನು ವಿವರಿಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ನಿರಂತರವಾಗಿ ಸೋಂಕಿತರು, ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡುವುದರೊಂದಿಗೆ ತಂತ್ರಜ್ಞಾನದ ಸದ್ಬಳಕೆ ಮಾಡಿಕೊಳ್ಳಲಾಗಿದೆ.

* ರಾಜ್ಯದಲ್ಲಿ ಪ್ರಸ್ತುತ ಒಂದು ಲಕ್ಷ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗಿದ್ದು, ಇದನ್ನು 2 ಲಕ್ಷಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ.

* ರಾಜ್ಯದಲ್ಲಿ 673 ಫೀವರ್ ಕ್ಲಿನಿಕ್ ಗಳನ್ನು ಸ್ಥಾಪಿಸುವ ಮೂಲಕ ಆಸ್ಪತ್ರೆಗಳು ಸೋಂಕು ಹರಡುವ ತಾಣವಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

* ರಾಜ್ಯದಲ್ಲಿರುವ 1.68 ಕೋಟಿ ಕುಟುಂಬಗಳಲ್ಲಿ 1.5 ಕೋಟಿ ಕುಟುಂಬಗಳ ಸಮೀಕ್ಷೆ ನಡೆಸಿದ್ದು, ಕೋವಿಡ್ ಸೋಂಕಿನಿಂದ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವ ವ್ಯಕ್ತಿಗಳ ಮಾಹಿತಿಯನ್ನು ದಾಖಲಿಸಲಾಗಿದೆ. ಇದರಿಂದ ಮುನ್ನೆಚ್ಚರಿಕೆ ವಹಿಸಲು ಹಾಗೂ ಇಂತಹ ವ್ಯಕ್ತಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಲು ಸಾಧ್ಯವಾಗಿದೆ ಎಂದು ವಿವರಿಸಿದರು.

* ರಾಜ್ಯದಲ್ಲಿ ಕೋವಿಡ್ ಸೋಂಕು ಪರೀಕ್ಷೆ ನಡೆಸುವ ಪ್ರಯೋಗಾಲಯಗಳ ಸಂಖ್ಯೆ 72ಕ್ಕೆ ಹೆಚ್ಚಿದ್ದು, ಪರೀಕ್ಷಾ ಸಾಮರ್ಥ್ಯ ದಿನಕ್ಕೆ 15 ಸಾವಿರಕ್ಕೆ ಹೆಚ್ಚಿಸಲಾಗಿದೆ.

* ಪ್ರತಿ ದಶಲಕ್ಷ ಜನಸಂಖ್ಯೆಗೆ ರಾಜ್ಯದಲ್ಲಿ 7500 ಪರೀಕ್ಷೆ ನಡೆಸಲಾಗುತ್ತಿದ್ದು, ಶೇ. 1.6 ರಷ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ದೈನಂದಿನ ಬೆಳವಣಿಗೆ ದರ ಶೇಕಡಾ 3.6 ರಷ್ಟಿದೆ ಎಂದು ಪ್ರಧಾನ ಮಂತ್ರಿಯವರಿಗೆ ಮಾಹಿತಿ ನೀಡಿದರು.

* ಕೋವಿಡ್ ವಾರ್ ರೂಂ ಸ್ಥಾಪನೆಯ ಮೂಲಕ ಸೋಂಕು ನಿಯಂತ್ರಣ ಪ್ರಕ್ರಿಯೆಯ ಮೇಲೆ ನಿರಂತರ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಮಾಹಿತಿ ಸಂಗ್ರಹ ನಡೆಸಲಾಗುತ್ತಿದೆ.

* ರಾಜ್ಯದ ಎಲ್ಲ ಭಾಗಗಳಲ್ಲಿಯೂ ಕೋವಿಡ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಟೆಲಿ ಐಸಿಯು ವ್ಯವಸ್ಥೆ ರೂಪಿಸಲಾಗಿದ್ದು, ತಜ್ಞ ವೈದ್ಯರೊಂದಿಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು ನಿರಂತರ ಸಂಪರ್ಕದಲ್ಲಿದ್ದು ಸಲಹೆ, ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ವಿವರಿಸಿದರು.

ಪ್ರಾತ್ಯಕ್ಷಿಕೆ ನೀಡಿದ ಸುಧಾಕರ್

ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಪ್ರಾತ್ಯಕ್ಷಿಕೆ ನೀಡಿದರು.
 ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ತಂತ್ರಜ್ಞಾನದ ಬಳಕೆ, ತರಬೇತಿ ಕಾರ್ಯಕ್ರಮಗಳು, ಪಂಚಾಯತ್ ಮಟ್ಟದಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು ಮೊದಲಾದ ವಿಷಯಗಳ ಕುರಿತು ಮಾಹಿತಿ ನೀಡಿದರು.