ಜೂನ್ 23 ರಂದು ಸಿಎಂ ಸಿದ್ದರಾಮಯ್ಯ ರಾಯಚೂರು ಜಿಲ್ಲೆಯ ಯರಗೇರಾಕ್ಕೆ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ ಮತ್ತು ಬುಡಕಟ್ಟು ಸಾಂಸ್ಕೃತಿಕ ಉತ್ಸವದ ಉದ್ಘಾಟನೆ ಕೂಡ ನಡೆಯಲಿದೆ.

ರಾಯಚೂರು(ಜೂ.22): ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಜೂನ್ 23) ರಾಯಚೂರು ಜಿಲ್ಲೆಯ ಯರಗೇರಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿತವಾಗಿರುವ ಭವ್ಯ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ವಿಶೇಷ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಈ ಸಂದರ್ಭಕ್ಕಾಗಿ ರಾಯಚೂರಿನ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ವಿಶೇಷ ಹೆಲಿಪ್ಯಾಡ್ ನಿರ್ಮಾಣವಾಗಿದೆ. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೊದಲಿಗೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕವನ್ನು ಅನಾವರಣಗೊಳಿಸಲಿದ್ದಾರೆ. ಬಳಿಕ ಬುಡಕಟ್ಟು ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ, 371(ಜೆ) ದಶಮಾನೋತ್ಸವ ಸಂಭ್ರಮವನ್ನು ಆಚರಿಸಲಾಗುತ್ತಿರುವ ಹಿನ್ನೆಲೆ ಸಮಾರಂಭಕ್ಕೆ ಅದ್ದೂರಿ ಸಿದ್ಧತೆ ನಡೆಸಲಾಗಿದೆ.

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ 936 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಹಲವು ಕಾಮಗಾರಿಗಳ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಈ ಭವ್ಯ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಸಚಿವ ಎನ್.ಎಸ್. ಬೋಸರಾಜು ಸೇರಿದಂತೆ 10ಕ್ಕೂ ಹೆಚ್ಚು ಸಚಿವರು ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ 40 ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ಸಾಧ್ಯತೆಯಿದೆ. ರಾಯಚೂರಿನ ಈ ಕಾರ್ಯಕ್ರಮವು ಜಿಲ್ಲೆಯ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಜನತೆ ಆಶಯ ವ್ಯಕ್ತಪಡಿಸಿದ್ದಾರೆ.