ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ, ಎಐವಿಎಂ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು 95 ನೇ ವಯಸ್ಸಿನಲ್ಲಿ ನಿಧನರಾದರು. ಅವರು 6 ಬಾರಿ ಶಾಸಕ, 1 ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದರು.
ಬೆಂಗಳೂರು (ಡಿ.14): ರಾಜ್ಯ ರಾಜಕಾರಣದ ಹಿರಿಯ ಧುರೀಣ, ಮಾಜಿ ಸಚಿವರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ಇಂದು (ಡಿಸೆಂಬರ್ 14) ಸಂಜೆ 6.45ಕ್ಕೆ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.
ಕಳೆದ ಒಂದು ವಾರದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ದಶಕಗಳ ರಾಜಕೀಯ ಅನುಭವ
ಕರ್ನಾಟಕದ ರಾಜಕೀಯದಲ್ಲಿ ಅಜಾತಶತ್ರು ಎಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದರು. ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿ ಕೂಡ ಅಪಾರ ಕೊಡುಗೆ ನೀಡಿದ್ದಾರೆ.
ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ತಂದೆಯವರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ದುಃಖ ಮಡುಗಿದೆ. ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಮತ್ತು ಪಕ್ಷಾತೀತ ನಾಯಕರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಸಂಸ್ಥೆಯಾದ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಅವರು ಸಮುದಾಯದ ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಮಹತ್ತರ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ರಾಜ್ಯವು ಒಬ್ಬ ಅನುಭವಿ ರಾಜಕೀಯ ನಾಯಕನನ್ನು ಹಾಗೂ ಮಹತ್ವದ ಸಾಮಾಜಿಕ ಮುಖಂಡನನ್ನು ಕಳೆದುಕೊಂಡಂತಾಗಿದೆ. ಅವರ ಅಂತಿಮ ಸಂಸ್ಕಾರದ ಕುರಿತು ಕುಟುಂಬ ಮೂಲಗಳು ಮತ್ತು ಪಕ್ಷದ ವತಿಯಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.
ಶಾಮನೂರು ಗ್ರೂಪ್ ಮಾಲೀಕರು
ಶ್ಯಾಮನೂರ್ ಶಿವಶಂಕರಪ್ಪರವರು ದಾವಣಗೆರೆಯ ಅಂಗವಿಕಲರ ಆಶಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್‍ನ ಅಧ್ಯಕ್ಷರು.ಇವರು ಅಖಿಲ ಭಾರತ ವೀರಶಿವ ಮಹಾಸಭೆಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಇವರು, ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳು ಸೇರಿ, ಬಾಪುಜಿ ಎಂಜಿನಿಯರಿಂಗ್ ಅಸೋಸಿಯೇಷನ್‍ರ ಅಧ್ಯಕ್ಷರಾಗಿದ್ದಾರೆ. ಶಿಕ್ಷಣವಾದಿ ಮತ್ತು ಕೈಗಾರಿಕೋದ್ಯಮಿಯಾಗಿದ್ದು, ಸಕ್ಕರೆ ಮತ್ತು ಡಿಸ್ಟಿಲರೀಸ್‍ನ ವ್ಯಾಪಾರ ಮಾಡುವ ಶ್ಯಾಮನೂರ್ ಗ್ರೂಪ್ ಮಾಲೀಕರಾಗಿದ್ದರು.

