* ನಾಳೆಯಿಂದ ಡೀಸಿಗಳ ಜತೆ ಸಿದ್ದು ಆನ್ಲೈನ್ ಸಭೆ* ಕೊರೋನಾ ನಿಗ್ರಹ, ಚಿಕಿತ್ಸೆ ಬಗ್ಗೆ ಮಾಹಿತಿ ಸಂಗ್ರಹ* ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಿದ್ದರಾಮಯ್ಯ ಸಿದ್ಧತೆ
ಬೆಂಗಳೂರು(ಮೇ.20): ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಲು ಮುಂದಾಗಿದ್ದಾರೆ.
ಈ ಬಗ್ಗೆ ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲಾಕ್ಡೌನ್ ಬೆನ್ನಲ್ಲೇ ಹಳ್ಳಿಗಳಿಗೆ ಸೋಂಕು ತೀವ್ರ ಪ್ರಮಾಣದಲ್ಲಿ ಹರಡಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡಲು ಮಾಡಿಕೊಂಡಿರುವ ವ್ಯವಸ್ಥೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ.
ಶುಕ್ರವಾರದಿಂದ ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿ ಜತೆಗೆ ತಲಾ 1 ಗಂಟೆ ಸಮಾಲೋಚನೆ ನಡೆಸಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊರೋನಾ ನಿಯಂತ್ರಣದಲ್ಲಿ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ವಿಪಕ್ಷ ನಾಯಕರು ಮಾಹಿತಿ ಪಡೆಯಬಹುದು:
ಇನ್ನು ವಿರೋಧಪಕ್ಷದ ನಾಯಕರು ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿರುವುದು ಚರ್ಚೆಗೆ ಕಾರಣವಾಗಿದ್ದು, ಸಿದ್ದರಾಮಯ್ಯ ಅವರು ಅಧಿಕೃತವಾಗಿ ಜಿಲ್ಲಾಧಿಕಾರಿಗಳ ಸಭೆ ಕರೆಯಲು ಅವಕಾಶವಿಲ್ಲ.
ಆದರೆ ‘ಶ್ಯಾಡೋ ಸಿಎಂ’ ಆಗಿ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆಯಬಹುದು. ಆದರೆ ಈ ವೇಳೆ ಯಾವುದೇ ಕ್ರಮಗಳಿಗೆ ಜಿಲ್ಲಾಧಿಕಾರಿಗಳಿಗೆ ಆದೇಶ, ನಿರ್ದೇಶನ ನೀಡುವಂತಿಲ್ಲ. ಬದಲಿಗೆ ಮಾಹಿತಿ ಆಧರಿಸಿ ಸರ್ಕಾರ ಅಥವಾ ಸಚಿವರಿಗೆ ಕ್ರಮಕ್ಕೆ ಒತ್ತಾಯಿಸಬಹುದು ಎಂದು ಸರ್ಕಾರದ ಮೂಲಗಳು ಸ್ಪಷ್ಟಪಡಿಸಿವೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
