Asianet Suvarna News Asianet Suvarna News

ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಜಾರಿಗೊಳಿಸಲು ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ

ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನು ಆಗ್ರಹಿಸಿ ಮಾರ್ಚ್  1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.

Karnataka Govt Employees Are Going on Indefinite Strike From March 1 gow
Author
First Published Feb 23, 2023, 8:19 PM IST

ವರದಿ : ವರದರಾಜ್, ಏಷ್ಯಾನೆಟ್ ಸುವರ್ಣನ್ಯೂಸ್

ದಾವಣಗೆರೆ (ಫೆ.23): ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನು ಆಗ್ರಹಿಸಿ ಮಾರ್ಚ್  1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಾಲಾಕ್ಷಿ ತಿಳಿಸಿದರು. ಸುದ್ದಿಗೋಷ್ಟಿ ಯಲ್ಲಿ ಮಾತನಾಡಿದ ಅವರು, ಫೆಬ್ರವರಿ 21ರಂದು ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ ತಾಲ್ಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು- ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ. 8000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದ 2023-24ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು 2022ರ ಜುಲೈ 1ರಿಂದ ಜಾರಿಗೊಳಿಸಬೇಕಾಗಿತ್ತು. ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ರಾವ್‌ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿದ್ದು, ಆಯೋಗದ ಮುಂದೆ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ತ್ರತ ವರದಿಯನ್ನು ಸಿದ್ದಪಡಿಸಿ ಸಲ್ಲಿಸಿತ್ತು ಎಂದು ಮಾಹಿತಿ ನೀಡಿದರು.

ರಾಜ್ಯ ಸರ್ಕಾರದ ಅಧಿಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಅವರ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದಾಗ್ಯೂ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಭೆಯು ಒಕ್ಕೊರಲಿನಿಂದ ಅಸಮ್ಮತಿ ವ್ಯಕ್ತಪಡಿಸಿ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.

Bengaluru – Mysuru Expressway: ರಾಷ್ಟ್ರೀಯ ಪ್ರಾಧಿಕಾರದ ಲೆಟ್‌ ಹರಿದು ಹಾಕಿದ ಮಂಡ್ಯ ಜನರು: ಪೊಲೀಸರಿಂದ ಲಾಠಿ ಚಾರ್ಜ್‌

ರಾಜ್ಯ ನೌಕರರು ಸರ್ಕಾರಿ ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನ ಆಯೋಗದ ಮಾದರಿಯಂತೆ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು, ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲು ಶೇ. 40 ಫಿಟ್‌ ಮೆಂಟ್‌ ಸೌಲಭ್ಯವನ್ನು ಜುಲೈ 1, 2022ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಹೇಳಿದರು.

ಮಾ.1ರಿಂದ ಮುಷ್ಕರಕ್ಕೆ ಸರ್ಕಾರಿ ನೌಕರರ ಸಿದ್ಧತೆ

ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾ ಕಾಲಕ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತಿಸ್‌ ಘಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ರಾಮಪ್ಪ, ಮುಬಾರಕ್ ಅಲಿ, ಹಾಲಪ್ಪ, ಡಾ.ಮುರಳಿ, ಬಿ.ಕೆ ರೇಣುಕಾಮೂರ್ತಿ, ಶಿವಾನಂದ ದಳವಾಯಿ, ಲೋಹೀತ್ ಕುಮಾರ್, ಸಿದ್ದೇಶ್, ಸಂಗಮೇಶ್, ಕರಿಬಸಪ್ಪ, ಗೋವಿಂದಪ್ಪ, ಮಂಜಮ್ಮ, ಕೆಎಂಹೆಚ್ ಸ್ವಾಮಿ ಮತ್ತಿತರರಿದ್ದರು.

Follow Us:
Download App:
  • android
  • ios