ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ 10 ದಿನದಲ್ಲಿ 5 ಬಾಣಂತಿಯರ ಸಾವಿನ ವರದಿ ಮುಚ್ಚಿಟ್ಟ ಸರ್ಕಾರ; ಆರ್. ಅಶೋಕ್!

ಬಳ್ಳಾರಿಯಲ್ಲಿ ಐದು ಬಾಣಂತಿಯರ ಸಾವಿನ ಬಗ್ಗೆ ತಜ್ಞರ ತಂಡದ ವರದಿಯನ್ನು ಕಾಂಗ್ರೆಸ್ ಸರ್ಕಾರ ಗೌಪ್ಯವಾಗಿಟ್ಟಿದೆ. ಕಳಪೆ ಔಷಧಿ ಪೂರೈಕೆಯ ಬಗ್ಗೆಯೂ ಅನುಮಾನಗಳು ಮೂಡಿವೆ. ಸರ್ಕಾರ ಯಾರನ್ನು ರಕ್ಷಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪ ಮಾಡಿದ್ದಾರೆ.

Karnataka Govt hide report of deaths of 5 maternal in 10 days at Ballari Hospital sat

ಬೆಂಗಳೂರು (ನ.29): ಬಳ್ಳಾರಿ ಆಸ್ಪತ್ರೆಯಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದ ಗರ್ಭಿಣಿಯರ ಪೈಕಿ 10 ದಿನಗಳಲ್ಲಿ 5 ಬಾಣಂತಿಯರು ಸಾವನ್ನಪ್ಪಿದ ಬಗ್ಗೆ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮರೆಮಾಚಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪ ಮಾಡಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಬಳ್ಳಾರಿಯ ಜಿಲ್ಲಾಸ್ಪತ್ರೆ ಹಾಗು ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಲ್ಲಿ 5 ಬಾಣಂತಿ ಮಹಿಳೆಯರ ಸಾವಾಗಿದ್ದು, ಈ ಬಗ್ಗೆ ತಜ್ಞರ ತಂಡ ತನಿಖೆ ಮಾಡಿ ನೀಡಿರುವ ವರದಿಯನ್ನ ಕಾಂಗ್ರೆಸ್ ಸರ್ಕಾರ ಗೌಪ್ಯವಾಗಿ ಮುಚ್ಚಿಟ್ಟಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಸರಣಿ ಸಾವಿನ ಬೆನ್ನಲ್ಲೇ, ನವೆಂಬರ್ 16ನೆ ತಾರೀಖಿನಂದು ಖಾಸಗಿ ಕಂಪನಿಯೊಂದು ಸರಬರಾಜು ಮಾಡಿರುವ Ringer Lactate Infusion ಔಷದಿಯನ್ನ ಬಳಕೆ ಮಾಡದಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಸುತ್ತೋಲೆ ಹೊರಡಿಸಿದೆ. 

ಬಳ್ಳಾರಿಯಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿಗೂ ಈ ಸುತ್ತೋಲೆಗೂ ಏನಾದರೂ ಸಂಬಂಧವಿದೆಯೇ? ಈ ಕಳಪೆ ಗುಣಮಟ್ಟದ ಔಷಧಿ ಪೂರೈಕೆಗೆ, ಬಳಕೆಗೆ ಹೊಣೆ ಯಾರು? ಸರ್ಕಾರ ವರದಿಯನ್ನ ಮುಚ್ಚಿಡುವ ಮೂಲಕ ಯಾರನ್ನು ರಕ್ಷಿಸುತ್ತಿದೆ? ಇಡೀ ಕರ್ನಾಟಕವೇ ಬೆಚ್ಚಿ ಬೀಳುವ ಇಂತಹ ಆಘಾತಕಾರಿ ಘಟನೆ ನಡೆದಿದ್ದರೂ ಸಿಎಂ ಸಿದ್ದರಾಮಯ್ಯ ಅವರಾಗಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಾಗಲಿ ಇದರ ಬಗ್ಗೆ ಕ್ರಮ ಕೈಗೊಳ್ಳುವುದಿರಲಿ, ಕನಿಷ್ಠ ಪಕ್ಷ ಸಂತಾಪ ಕೂಡ ಸೂಚಿಸಿಲ್ಲ. ಇನ್ನು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಆಹಮದ್ ಖಾನ್ ಅವರು ಈವರೆಗೂ ಜಿಲ್ಲೆಗೆ ಭೇಟಿ ನೀಡುವ ಗೋಜಿಗೂ ಹೋಗಿಲ್ಲ.

ಇದನ್ನೂ ಓದಿ: ಡಿಕೆಶಿ ಸೇನಾಪತಿ ಹುದ್ದೆ ಮೇಲೆ ಕಣ್ಣಿಟ್ಟ ಸಿದ್ದರಾಮಯ್ಯ ಬಣ; ಇಲ್ಲಿದೆ ರಾಜಕೀಯ ಒಳಸಂಚು!

ಈ ಪ್ರಕರಣದ ನೈತಿಕೆ ಹೊಣೆ ಹೊತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಕೂಡಲೇ ರಾಜೀನಾಮೆ ನೀಡಬೇಕು. ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನ ಒತ್ತಾಯಿಸುತ್ತೇನೆ' ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

Latest Videos
Follow Us:
Download App:
  • android
  • ios