ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಹಿಂದೂಪರ ಸಂಘಟನೆಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿದೆ. ಇದರಿಂದ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ.
ಬೆಂಗಳೂರು, (ಜುಲೈ.30): ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಹತ್ಯೆ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.
ಇದಕ್ಕೆ ಪೂರಕವೆಂಬಂತೆ ಇಂದು(ಶನಿವಾರ) ಬೆಂಗಳೂರಿನಲ್ಲಿ ಎಬಿವಿಪಿ ಕಾರ್ಯಕರ್ತರು ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ಗೇಟ್ ತಳ್ಳಿ ನೇರವಾಗಿ ಮೆನೆಯೊಳಗೆ ನುಗ್ಗಿದ್ದಾರೆ. ಇದರಿಂದ ಸರ್ಕಾರ ಎಲ್ಲಾ ಸಚಿವ ನಿವಾಸಗಳೀಗೆ ಭದ್ರತೆ ಹೆಚ್ಚಿಸಿದೆ.
ಹೌದು...ಎಲ್ಲಾ ಸಚಿವ ನಿವಾಸಗಳಿಗೆ ಭದ್ರತೆ ಹೆಚ್ಚಿಸಿ, ಅಲ್ಲದೇ ಪ್ರತಿಭಟನೆಕಾರರ ಮೇಲೆ ನಿಗಾವಹಿಸುಲು ಡಿಸಿಪಿಗಳಿಗೆ ಪೊಲೀಸ್ ಆಯುಕ್ತ ಸೂಚನೆ ನೀಡಿದ್ದಾರೆ. ಇದಕ್ಕೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಅವರು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಜೊತೆ ಸಭೆ ನಡೆಸಿದ್ದಾರ.
ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಗೆ ಮುತ್ತಿಗೆ; 40 ಎಬಿವಿಪಿ ಕಾರ್ಯಕರ್ತರ ಬಂಧನ
ಪ್ರವೀಣ್ ಸೂದ್ ಜೊತೆ ಸಿಎಂ ಸಭೆ
ಸರ್ಕಾರದ ವಿರುದ್ಧ ಹಿಂದೂಪರ ಸಂಘಟನೆಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಜೊತೆ ಸಭೆ ನಡೆಸಿದ್ದಾರೆ.ಪ್ರವೀಣ್ ಸೂದ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಬೊಮ್ಮಾಯಿ ಅವರು ಕಾನೂನು ಸುವ್ಯವಸ್ಥೆ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ಕಾವು ರಾಜ್ಯಾದ್ಯಂತ ಹಬ್ಬಬಹುದೆಂಬ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ.
ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಬಿಜೆಪಿ ಪ್ರಾಬಲ್ಯವಿರುವ ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಜಿಲ್ಲೆಗಳಲ್ಲಿ ಬಿಗಿ ಭದ್ರತೆ ತೆಗೆದುಕೊಳ್ಳಬೇಕೆಂದು ಪ್ರವೀಣ್ ಸೂದ್ ಗೆ ಸಿಎಂ ನಿರ್ದೇಶನ ನೀಡಿದ್ದಾರೆ.
ಒಂದು ವೇಳೆ ಭದ್ರತಾ ಲೋಪ ಕಂಡುಬಂದರೆ ಪೊಲೀಸರ ಮೇಲೆ ಶಿಸ್ತು ಕ್ರಮ ಜರುಗಿಸಲು ಹಿಂದುಮುಂದೆ ನೋಡುವುದಿಲ್ಲ ಎಂದು ಸಿಎಂ ಎಚ್ಚರಿಕೆಯನ್ನು ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದಾರೆ. ಗುಪ್ತಚರ ವಿಭಾಗವನ್ನು ಬಲಪಡಿಸಲಾಗಿದೆ. ವಿಶೇಷವಾಗಿ ಹೊರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಕೇರಳ ಗಡಿಭಾಗದಲ್ಲಿರುವ ಮಂಗಳೂರು, ಕಾಸರಗೋಡು ಸೇರಿದಂತೆ ಮತ್ತಿತರ ಕಡೆ ಚೆಕ್ ಪೋಸ್ಟ್ ಗಳನ್ನು ಹೆಚ್ಚಳ ಮಾಡಲಾಗಿದೆ. ಹೊರ ರಾಜ್ಯಗಳಿಂದ ಬರುತ್ತಿರುವ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಶಂಕಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.
ಗೃಹ ಸಚಿವ ನಿವಾಸಕ್ಕೆ ಮುತ್ತಿಗೆ
ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷ, ಮಂಗಳೂರಿನಲ್ಲಿ ಕೊಲೆಯಾದ ಪ್ರವೀಣ್ ನೆಟ್ಟಾರು ಸೇರಿದಂತೆ ಇತ್ತೀಚೆಗೆ ಹಿಂದೂ ಯುವಕರ ನಡೆದ ಹತ್ಯೆಗಳ ಹಿಂದೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಇದೆ ಎಂದು ಆರೋಪಿಸಿ ಎಬಿವಿಪಿ ಪ್ರತಿಭಟಿಸುತ್ತಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಧಿಕೃತ ಸರ್ಕಾರಿ ನಿವಾಸದ ಮೇಲೆ ಮುತ್ತಿಗೆ ಹಾಕಲಾಗಿದೆ.
ಮನೆಯ ಆವರಣದಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಲಾಗಿದ್ದು ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಹಿಂದೂ ಯುವಕರ ಹತ್ಯೆಯ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿಲ್ಲ. ಪ್ರಕರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತಿಲ್ಲ ಎಂದು ಎಬಿವಿಪಿ ಆರೋಪಿಸಿದೆ. ಜತೆಗೆ ಗೃಹ ಸಚಿವರು ಅಸಮರ್ಥರು ಎಂಬ ರೀತಿಯಲ್ಲಿ ಅವರ ಪಕ್ಷದ ಕಾರ್ಯಕರ್ತರೇ ಪ್ರತಿಭಟನೆಗೆ ಇಳಿದಿರುವುದು ಬಿಜೆಪಿಗೆ ಇರಿಸುಮುರುಸಾಗಿದೆ. ಬೆಂಗಳೂರಿನ ಜಯಮಹಲ್‌ನಲ್ಲಿರುವ ನಿವಾಸದ ಮೇಲೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಆದರೆ ಮೂಲಗಳ ಪ್ರಕಾರ ಜ್ಞಾನೇಂದ್ರ ತೀರ್ಥಳ್ಳಿಯಲ್ಲಿದ್ದಾರೆ.
