3ನೇ ಅಲೆ ಎದುರಿಸಲು ಸರ್ಕಾರ ಸಿದ್ಧ : ತಜ್ಞರ ಸಮಿತಿ ವರದಿ ಆಧರಿಸಿ ಕ್ರಮ
- ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಸಿದ್ಧ
- ಜನರು ಭೀತಿಪಡುವ ಅಗತ್ಯವಿಲ್ಲ ಎಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
- ಡಾ. ದೇವಿಪ್ರಸಾದ್ ಶೆಟ್ಟಿಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ
ಶಿವಮೊಗ್ಗ (ಜೂ.13): ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ ವಿವಿಧ ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರನೇ ಅಲೆ ಕುರಿತು ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸರ್ಕಾರ ಡಾ. ದೇವಿಪ್ರಸಾದ್ ಶೆಟ್ಟಿಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ಈಗಾಗಲೇ ರಚಿಸಿದೆ. ಈ ಸಮಿತಿ ಮೂರ್ನಾಲ್ಕು ದಿನಗಳಲ್ಲಿ ವರದಿಯನ್ನು ಸಲ್ಲಿಸಲಿದ್ದು, ಸಮಿತಿಯ ವರದಿಯ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಮತ್ತೆ ರಾಜ್ಯದಲ್ಲಿ 5% ಗಡಿ ದಾಟಿದ ಪಾಸಿಟಿವಿಟಿ ದರ ...
ಅಲ್ಲದೆ ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆಯಾಗಲಿದೆ ಎಂಬ ವರದಿಗಳಿದ್ದು, ಕೋವಿಡ್‌ನಿಂದ ಮಕ್ಕಳನ್ನು ರಕ್ಷಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಮಾಡಲಾಗುವುದು. ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 75 ಮಕ್ಕಳ ಐಸಿಯು ಬೆಡ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು. ಸಚಿವರಾದ ಭೈರತಿ ಬಸವರಾಜ್, ಕೆ.ಎಸ್. ಈಶ್ವರಪ್ಪ, ಕೆ. ಸುಧಾಕರ್, ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.
ಶಿವಮೊಗ್ಗ ಮಾದರಿ ಜಿಲ್ಲೆ: ಇನ್ನು ಒಂದೂವರೆ ವರ್ಷದಲ್ಲಿ ಶಿವಮೊಗ್ಗ ರಾಜ್ಯದಲ್ಲೆ ಮಾದರಿ ಜಿಲ್ಲೆಯಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಅಭಿವೃದ್ದಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.