ಬೆಂಗಳೂರು(ಜೂ.10): ರಾಜ್ಯದಲ್ಲಿ ಕೋವಿಡ್‌ 19 ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ ಲಾಕ್‌ಡೌನ್‌ ಸಡಿಲಿಕೆ ನಡುವೆಯೂ ಹುಟ್ಟು ಹಬ್ಬ, ಕಿಟ್ಟಿಪಾರ್ಟಿಯಂತಹ ಕಾರ್ಯಕ್ರಮಗಳನ್ನು ಆಯೋಜಿಸದಂತೆ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘಗಳಿಗೆ (ಅಪಾರ್ಟ್‌ಮೆಂಟ್‌ಗಳು) ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಅತಿಥಿಗಳು ಸೇರಿದಂತೆ ಹೊರಗಿನಿಂದ ಬಂದ ಯಾವುದೇ ವ್ಯಕ್ತಿಗಳಿಗೆ ಕಡ್ಡಾಯವಾಗಿ ಥರ್ಮಲ್‌ ಸ್ಕ್ರೀನಿಂಗ್‌ ಮಾಡಬೇಕು. ಕಟ್ಟಡಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳಲ್ಲಿ ಕೈಗಳ ಸ್ವಚ್ಛತೆಗೆ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಬೇಕು. ಶೀತ, ಜ್ವರ, ಕೆಮ್ಮು ಸೇರಿದಂತೆ ರೋಗ ಲಕ್ಷಣ ಹೊಂದಿದ್ದಲ್ಲಿ ಹತ್ತಿರದ ಫಿವರ್‌ ಕ್ಲಿನಿಕ್‌ ಅಥವಾ ಆಸ್ಪತ್ರೆಗೆ ಕಳುಹಿಸಬೇಕು. ಅವರಿಂದ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನಿಗಾ ವಹಿಸಲು ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕು.

ಲಿಫ್ಟ್‌, ಉದ್ಯಾನವನ, ನಡಿಗೆ ಪಥ ಸೇರಿದಂತೆ ಸಾಮಾನ್ಯ ಸ್ಥಳಗಳಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಎಲ್ಲೆಡೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಜಿಮ್‌ ಮತ್ತು ಈಜುಕೊಳಗಳನ್ನು ಬಳಸಬಾರದು. ಹೋಂ ಕ್ವಾರಂಟೈನ್‌ಗೆ ಒಳಗಾದವರು ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸುವಂತೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಮಾರ್ಗಸೂಚಿ ಹೊರಡಿಸಿದ್ದಾರೆ.

ನೆರೆ ಹೊರೆಯವರ ಆರೋಗ್ಯ ಸ್ಥಿತಿಗತಿ ಬಗ್ಗೆ ನಿಗಾ ವಹಿಸಿ, ಕಳೆದ 14 ದಿನಗಳಲ್ಲಿ ಹೊರದೇಶ, ಹೊರ ರಾಜ್ಯಗಳ ಪ್ರಯಾಣ ಹಿನ್ನೆಲೆ ಹೊಂದಿದ್ದಲ್ಲಿ 14 ದಿನಗಳ ಹೋಂ ಕ್ವಾರಂಟೈನ್‌ಗೆ ಒಳಗಾಗಬೇಕು ಹಾಗೂ ಪ್ರಯಾಣ ಹಿನ್ನೆಲೆಯ ಕುರಿತು ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮಕ್ಕಳು, ವೃದ್ಧರು ಸೇರಿದಂತೆ ಅನಾರೋಗ್ಯ ಪೀಡಿತರು ಮನೆಯಿಂದ ಹೊರ ಹೋಗದಂತೆ ನೋಡಿಕೊಳ್ಳಬೇಕು. ರೋಗ ಲಕ್ಷಣಗಳು ಕಾಣಿಸಿಕೊಂಡಲ್ಲಿ ಸ್ವಯಂ ಆರೋಗ್ಯ ತಪಾಸಣೆಗೆ ಒಳಗಾಗಬೇಕು. ಮುನ್ನೆಚ್ಚರಿಕೆ ಕ್ರಮಗಳ ಪಾಲನೆಯ ಜತೆಗೆ ಆಪ್ತಮಿತ್ರ ಸಹಾಯವಾಣಿ ಸಂಖ್ಯೆ 14410 ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.