ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶ ತುಮಕೂರಿನಲ್ಲಿ ಆಯೋಜನೆ. ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ, ಮೇ 20ರಂದು ನಡೆಯಬೇಕಿದ್ದ 'ಸಾರ್ಥಕ ಸೇವೆಗಳ ಸಮರ್ಪಣೆ' ಕಾರ್ಯಕ್ರಮ ಮೇ 19ಕ್ಕೆ ಬದಲಾಯಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರು (ಮೇ.16): ಮೇ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ 3 ವರ್ಷಗಳು ತುಂಬಲಿದೆ. ಅದರ ಅಂಗವಾಗಿ ತುಮಕೂರಿನಲ್ಲಿ ರಾಜ್ಯದ ಜನತೆಗೆ ಆಗಿರುವ ಪ್ರಯೋಜನಗಳ ಸೌಲಭ್ಯ ವಿತರಣೆ ಕಾರ್ಯಕ್ರಮವಾಗಿ ಸಾರ್ಥಕ ಸೇವೆಗಳ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಅದಕ್ಕೆ ಮುನ್ನಾ ದಿನ 19ಕ್ಕೆ ಅಧಿಕೃತವಾಗಿ ಕಾರ್ಯಕ್ರಮ ನಿಗದಿಯಾಗಿದೆ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಅವರು ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಮಾತನಾಡಿ, ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಚಾಲನೆ ನೀಡಿ ಅವುಗಳನ್ನು ಆದ್ಯತಾ ಕಾರ್ಯಕ್ರಮಗಳಾಗಿ ತೆಗೆದುಕೊಂಡು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಈ ವಿಷಯವನ್ನು ಜನಸಮುದಾಯದೊಂದಿಗೆ ಹಂಚಿಕೊಳ್ಳಬೇಕಿತ್ತು. 20 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ 2ನೇ ಅವಧಿಯ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಸಂದ ಹಿನ್ನೆಲೆಯಲ್ಲಿ ಆ ದಿನದಂದು ಕಾರ್ಯಕ್ರಮ ಆಯೋಜಿಸಲು ಆರಂಭದಲ್ಲಿ ನಿರ್ಧರಿಸಲಾಗಿತ್ತು. ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಬೇಡಿಕೆ ಈಡೇರಿಸುವಂತೆ ಅಂದೇ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ತೊಂದರೆಯಾಗದಂತೆ ಅದಕ್ಕೆ ಮುನ್ನಾ ದಿನ 19ರಂದೇ ಕಾರ್ಯಕ್ರಮ ಆಯೋಜಿಸಲು ಮುಖ್ಯಮಂತ್ರಿಯವರು ಸೂಚಿಸಿದ ಹಿನ್ನೆಲೆಯಲ್ಲಿ ದಿನಾಂಕ ಮಾತ್ರ ಬದಲಾಗಿದೆ. ಉಳಿದಂತೆ ಎಲ್ಲ ಕಾರ್ಯಕ್ರಮಗಳು ಪೂರ್ವ ಯೋಜಿತದಂತೆ ನಡೆಯಲಿವೆ ಎಂದು ವಿವರಿಸಿದರು.