ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲು ನಿರ್ಧರಿಸಿದೆ. ಈ ಸಮೀಕ್ಷೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ಕಾಗಿ, ಆಶಾ ಕಾರ್ಯಕರ್ತೆಯರ ಸೇವೆ ಬಳಸಿಕೊಳ್ಳಲು ಅನುಮೋದನೆ ನೀಡಿದೆ. ಅವರಿಗೆ ಗೌರವಧನ ಪಾವತಿಸಲು ಆದೇಶಿಸಿದೆ.

ಬೆಂಗಳೂರು (ಸೆ.17): ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ. ಜಾತಿ ಸಮೀಕ್ಷೆ ಮಾಡುವಂತಹ ಆಶಾ ಕಾರ್ಯಕರ್ತೆಯರಿಗೆ ₹2000 ಗೌರವಧನ ನೀಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷರು, ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷ ಕಾರ್ಯವನ್ನು ಸೆ.22 ರಿಂದ ಅ.07ರ ವರೆಗೆ ಕೈಗೊಳ್ಳಲು ಉದ್ದೇಶಿಸಲಾಗಿರುತ್ತದೆ. ಇದಕ್ಕೆ ಇಂಧನ ಇಲಾಖೆಯ ಸಹಯೋಗದೊಂದಿಗೆ ವಿದ್ಯುಚ್ಛಕ್ತಿ ಮೀಟರ್ ಸಂಪರ್ಕ ಹೊಂದಿರುವ ಮನೆಗಳ ಪಟ್ಟಿಗಳ ಆಧಾರದ ಮೇಲೆ ಬ್ಲಾಕ್‌ಗಳನ್ನು ಗುರುತಿಸಿ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಆದೇಶಿಸಲಾಗಿರುತ್ತದೆ.

2000 ಗೌರವಧನ ಕೊಡುವುದಾಗಿ ಪ್ರಸ್ತಾಪ:

ಹೀಗಾಗಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಭೆಯಲ್ಲಿ 'ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025'ರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯವರ ಸೇವೆಯನ್ನು ಉಪಯೋಗಿಸಿಕೊಳ್ಳಲು ತೀರ್ಮಾನ ಮಾಡಲಾಗಿದೆ. ಜೊತೆಗೆ, ಆಶಾ ಕಾರ್ಯಕರ್ತೆಯರಿಗೆ ತಲಾ ರೂ.2000ಗಳ ಗೌರವಧನವನ್ನು ನೀಡಿ ಸೇವೆಯನ್ನು ಪಡೆಯಲು ಸಂಬಂಧಪಟ್ಟ ಇಲಾಖೆ ಅನುಮತಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯನ್ನು ಪರಿಶೀಲಿಸಿ ಆರೋಗ್ಯ ಇಲಾಕೆ ಈ ಕೆಳಗಿನಂತೆ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಶೈಕ್ಷಣಿಕ ಸ್ಥಿತಿಗಳ ಕುರಿತು ಕೈಗೊಳ್ಳಲಾಗುವ ಸಮೀಕ್ಷೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯದಲ್ಲಿ ಭಾಗವಹಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಂಬಂಧಿಸಿದ ಆಶಾ ಕಾರ್ಯಕರ್ತೆಯರಿಗೆ ನಿರ್ದೇಶನ ನೀಡಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ.

ಶೇ.90 ಕೆಲಸ ಮಾಡಿದರೂ ಗೌರವಧನ ಕೊಡಿ

ಮುಂದುವರೆದು, ಆರೋಗ್ಯ ಇಲಾಖೆಯಿಂದ ನಿಯೋಜಿಸಲಾದ ಆಶಾ ಕಾರ್ಯಕರ್ತೆಯರು ಶೇ.90ರಷ್ಟು ಮನೆಗಳಿಗೆ ಭೇಟಿ ನೀಡಿ ಜಾಗೃತಿ ಅಭಿಯಾನ ಆ್ಯಪ್ ಮೂಲಕ ಯು.ಹೆಚ್‌.ಐ.ಡಿ. ನಂಬರ್ ಹಾಗೂ ಮೊಬೈಲ್ ದೂರವಾಣಿ ಸಂಖ್ಯೆಗಳನ್ನು ಸಂಗ್ರಹಿಸುವ ಪ್ರತಿ ಆಶಾ ಕಾರ್ಯಕರ್ತೆಯರಿಗೆ ರೂ.2000ಗಳ ಗೌರವಧನವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಲೆಕ್ಕ ಶೀರ್ಷಿಕೆಯಡಿ ಒದಗಿಸುವ ಅನುದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ಪಾವತಿಸಲಾಗುವುದು ಎಂದು ತಿಳಿಸಿದೆ.