ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮಹಿಳೆಯರ ವಿರುದ್ಧದ ಇಂತಹ ಅಪರಾಧ ಗಂಭೀರವಾದುದು ಎಂದು ಪರಿಗಣಿಸಿ ಪೀಠವು ಈ ಆದೇಶ ನೀಡಿದೆ.
ಬೆಂಗಳೂರು (ಜೂ.22): ಕನ್ನಡ ಚಲನಚಿತ್ರ ನಟ ದರ್ಶನ್ ತೂಗುದೀಪ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಕಾಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಮೂವರು ಆರೋಪಿಗಳ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ಪೀಠವು ವಜಾಗೊಳಿಸಿದೆ.
ಪ್ರಕರಣದ ಹಿನ್ನೆಲೆ:
ದರ್ಶನ್ ಅಭಿನಯದ ಬಹುನಿರೀಕ್ಷಿತ 'ಡೆವಿಲ್' ಸಿನಿಮಾದ ಪ್ರಚಾರದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಜಯಲಕ್ಷ್ಮಿ ಅವರ ಬಗ್ಗೆ ಅತ್ಯಂತ ಅಸಭ್ಯ ಮತ್ತು ಅಶ್ಲೀಲವಾಗಿ ಕಾಮೆಂಟ್ ಮಾಡಲಾಗಿತ್ತು. ಈ ವಿಚಾರವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ವಿಜಯಲಕ್ಷ್ಮಿ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಖುದ್ದಾಗಿ ಆಗಮಿಸಿ ದೂರು ನೀಡಿದ್ದರು. ಅವರ ದೂರಿನನ್ವಯ ನಗರದ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳು ಯಾರು?:
ಈ ಪ್ರಕರಣದಲ್ಲಿ ಪ್ರಶಾಂತ್ ತಲ್ವಾರ್, ಚಂದ್ರಶೇಖರ್ ಮತ್ತು ನಿಂಗರಾಜ್ ಗುಲಾಪ್ಪ ತಲ್ವಾರ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಮೂವರು ಆರೋಪಿಗಳು ಈ ಹಿಂದೆ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಆರೋಪದ ಗಂಭೀರತೆಯನ್ನು ಪರಿಗಣಿಸಿದ್ದ ಸೆಷನ್ಸ್ ಕೋರ್ಟ್ ಇವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
ಹೈಕೋರ್ಟ್ ಮೆಟ್ಟಿಲೇರಿದ್ದ ಆರೋಪಿಗಳು:
ಸೆಷನ್ಸ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಮತ್ತು ತಮಗೆ ಜಾಮೀನು ನೀಡುವಂತೆ ಕೋರಿ ಈ ಮೂವರು ಆರೋಪಿಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠವು, ಮಹಿಳೆಯರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಅಶ್ಲೀಲ ಕಾಮೆಂಟ್ ಮಾಡುವುದು ಕಾನೂನುಬಾಹಿರ ಮತ್ತು ಗಂಭೀರ ಅಪರಾಧ ಎಂದು ಪರಿಗಣಿಸಿ, ಜಾಮೀನು ನೀಡಲು ನಿರಾಕರಿಸಿದೆ. ಈ ಮೂಲಕ ಅಶ್ಲೀಲ ಕಾಮೆಂಟ್ ಮಾಡಿದ ಕಿಡಿಗೇಡಿಗಳಿಗೆ ಕಾನೂನಿನ ಬಿಸಿ ಮುಟ್ಟಿಸಿದಂತಾಗಿದೆ.


