ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಬಿಸಿಲಿನ ತೀವ್ರತೆ ಹೆಚ್ಚಿರುವ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿಯೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗಗಳಲ್ಲಿ ಕೆಂಡದಂತಹ ಬಿಸಿಲು ದಾಖಲಾಗುವ ಸಾಧ್ಯತೆ ಇದ್ದು, ಜನಜೀವನದ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಒಣ ಹವಾಮಾನ
ರಾಜಧಾನಿ ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ಉಷ್ಣಾಂಶವು ಸುಮಾರು 35°C ರಿಂದ 37°C ನಡುವೆಯೇ ಇರಲಿದೆ ಎಂದು ಅಂದಾಜಿಸಲಾಗಿದೆ. ಬೆಳಿಗ್ಗೆ ಮತ್ತು ಸಂಜೆ ಸ್ವಲ್ಪ ತಂಪಾದ ವಾತಾವರಣ ಕಂಡುಬಂದರೂ, ಮಧ್ಯಾಹ್ನ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.
ಉತ್ತರ ಕರ್ನಾಟಕದಲ್ಲಿ ಬಿಸಿಲ ಧಗೆ ತೀವ್ರ
ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ 42°C ತನಕ ಏರಿಕೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಬಿಸಿಗಾಳಿ (Heat Wave) ಉಂಟಾಗುವ ಸಾಧ್ಯತೆಯೂ ಹೆಚ್ಚಿದ್ದು, ಜನರು ಹೆಚ್ಚಿನ ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ ಬಿಸಿಗಾಳಿಯ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಲಿದೆ. ಈ ಅವಧಿಯಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಹಿರಿಯ ನಾಗರಿಕರು, ಮಕ್ಕಳು ಮತ್ತು ಆರೋಗ್ಯ ಸಮಸ್ಯೆ ಹೊಂದಿರುವವರು ಹೆಚ್ಚಿನ ಎಚ್ಚರಿಕೆಯಿಂದಿರಬೇಕು.
ಕರಾವಳಿ ಜಿಲ್ಲೆಗಳಲ್ಲಿ ಸೆಕೆ–ಹಬೆ ಹೆಚ್ಚಳ
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ತೇವಾಂಶ ಹೆಚ್ಚಿರುವ ಕಾರಣ ಸೆಕೆ ಮತ್ತು ಹಬೆ (humidity) ಹೆಚ್ಚಾಗಲಿದೆ. ಇದರಿಂದ ಜನರಿಗೆ ತೀವ್ರ ಬೆವರಿನ ಜೊತೆಗೆ ಬಿಸಿಲಿನ ಅನುಭವವಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶಗಳಲ್ಲಿ ಉಷ್ಣಾಂಶ ಅಷ್ಟಾಗಿ ಏರಿಕೆಯಾಗದಿದ್ದರೂ, ಹವಾಮಾನ ಉರಿಯುತ್ತಿರುವ ಅನುಭವವಾಗಲಿದೆ
ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ
ಮಲೆನಾಡು ಭಾಗಗಳಲ್ಲಿ, ವಿಶೇಷವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ಅಲ್ಲಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಕನಿಷ್ಠ ಉಷ್ಣಾಂಶವು 20°C ರಿಂದ 22°C ನಡುವೆಯೇ ಇರಲಿದೆ.
ಜನರಿಗೆ ಎಚ್ಚರಿಕೆ ಮತ್ತು ಸಲಹೆಗಳು
ಹವಾಮಾನ ಇಲಾಖೆಯು ಉತ್ತರ ಕರ್ನಾಟಕದ ಜನರಿಗೆ ವಿಶೇಷ ಎಚ್ಚರಿಕೆ ನೀಡಿದ್ದು, ಬಿಸಿಲಿನ ತೀವ್ರತೆ ಹೆಚ್ಚಿರುವ ಸಮಯದಲ್ಲಿ ಮನೆಯೊಳಗೇ ಇರುವಂತೆ ಸಲಹೆ ನೀಡಿದೆ. ಮಧ್ಯಾಹ್ನ 12ರಿಂದ 4ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸಿ, ಹೆಚ್ಚು ನೀರು ಕುಡಿಯಿರಿ, ಹಗುರವಾದ ಬಟ್ಟೆ ಧರಿಸಿ . ನೇರ ಬಿಸಿಲಿನಿಂದ ದೂರವಿರಿ ಎಂದು ಸಲಹೆ ನೀಡಲಾಗಿದೆ.
9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲು
ವಿಪರೀತ ಬಿಸಿಲಿನ ಹಿನ್ನೆಲೆಯಲ್ಲಿ ಕಲಬುರಗಿ ಕಂದಾಯ ವಿಭಾಗದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳು, ಬೆಳಗಾವಿ ಕಂದಾಯ ವಿಭಾಗದ ವಿಜಯನಗರ, ಬಾಗಲಕೋಟೆ 2 ಜಿಲ್ಲೆಗಳು ಸೇರಿದಂತೆ 9 ಜಿಲ್ಲೆಗಳಲ್ಲಿನ ಸರ್ಕಾರದ ಕಚೇರಿಗಳ ಕೆಲಸದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗಿನ 8 ರಿಂದ ಮಧ್ಯಾಹ್ನ 1.30ರವರೆಗೆ ಸಮಯ ಬದಲಿಸಿ ಏ.1ರಿಂದಲೇ ಜಾರಿಗೆ ಬರುವಂತೆ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲು ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಷ/ ಅಡೆತಡೆಯಿಲ್ಲದ ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು/ಜಿಪಂ ಸಿಇಒ ತುರ್ತು ಸಂದರ್ಭಗಳಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಮಿತಿಯಿಲ್ಲದೆ ಕೆಲಸ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಒಟ್ಟಾರೆ, ರಾಜ್ಯದ ವಿವಿಧ ಭಾಗಗಳಲ್ಲಿ ವಿಭಿನ್ನ ಹವಾಮಾನ ಸ್ಥಿತಿಗಳು ಕಂಡುಬರುತ್ತಿದ್ದರೂ, ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತೀವ್ರತೆ ಹೆಚ್ಚು ಇರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ.


