ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ ಮುನ್ಸೂಚನೆ: 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸಿದ ಹಿನ್ನೆಲೆಯಲ್ಲಿ ಟ್ರಫ್ ಉಂಟಾಗಿದ್ದು, ಕರ್ನಾಟಕದಲ್ಲಿ ಮುಂದಿನ 3 ದಿನಗಳ ಕಾಲ ಭಾರಿ ಮಳೆಯಾಗಲಿದೆ. 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು (ನ.07): ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸಿದ್ದು ಟ್ರಫ್ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಕದ ದಕ್ಷಿಣ ಒಳನಾಡು, ಕರಾವಳಿ ಭಾಗ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ (ನವೆಂಬರ 7 ರಿಂದ ನವೆಂಬರ್ 9ರವರೆಗೆ) ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ. ಈ ವೇಳೆ ಮಳೆಯಾಗುವ ಪ್ರದೇಶಗಳಲ್ಲಿ ಸುಮಾರು 35 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.
ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಗದಗ, ಹಾವೇರಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ, ಮುಂದಿನ 2 ದಿನಗಳಲ್ಲಿ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು: ಬದುಕು ಕಿತ್ತುಕೊಂಡ ಜಾಗದಲ್ಲೇ ಚಪ್ಪಲಿ ಹೊಲೆಯುವ ಕೆಲಸ ಆರಂಭಿಸಿದ ವೃದ್ಧ ನಂಜುಡಪ್ಪ
ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಭಾಗಗಳಲ್ಲಿ ಕನಿಷ್ಠ ತಾಪಮಾನವು ದಾಖಲಾಗಲಿದೆ. ಅಂದರೆ, ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ. ಇನ್ನು ಮೀನುಗಾರಿಕೆಗೆ ತೆರಳುವವರಿಗೆ ಯಾವುದೇ ಮುನ್ಸೂಚನೆಯಿಲ್ಲ. ಉತ್ತರ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಹಗುರದಿಂದ ಮಳೆಯಾಗಲಿದ್ದು, ಮೀನುಗಾರರಿಗೆ ಆತಂಕವಿಲ್ಲ ಎಂದು ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಕೆಲವೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಸರ್ಕಾರಿ ಆಸ್ಪತ್ರೆಗಳಲ್ಲಿ 16,500 ವೈದ್ಯಕೀಯ ಸಿಬ್ಬಂದಿ ಹುದ್ದೆ ಖಾಲಿ: ಸುಮೊಟೊ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್
ಇನ್ನು ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ನಿಗಾ ಕೇಂದ್ರ (ಕೆಎಸ್ಎನ್ ಡಿಎಂಸಿ) ಉಪಗ್ರಹಾಧಾರಿತ ಮಳೆ ನಕ್ಷೆಯ ಮಾಹಿತಿಯಂತೆ ನ. 11ರಿಂದ 14ರವರೆಗೆ ರಾಜ್ಯದಲ್ಲಿ ಎಲ್ಲೂ ಮಳೆಯಾಗುವುದಿಲ್ಲ ಎಂದು ಹೇಳುತ್ತಿದೆ. ಆದರೆ, ನ. 15ರಂದು ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರಗಳಲ್ಲಿ ಮಳೆಯಾಗಲಿದ್ದು, ಅದರಲ್ಲೂ ವಿಶೇಷವಾಗಿ ಮೈಸೂರು, ಚಾಮರಾಜನಗರದಲ್ಲಿ ಗರಿಷ್ಠ 30 ಮಿ.ಮೀ. ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.