ಹಾಸನ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದ ಪ್ರಜ್ವಲ್ ರೇವಣ್ಣಗೆ ಮತ್ತೆ ಶಾಕ್ ಕೊಟ್ಟ ಹೈಕೋರ್ಟ್
ಈಗಾಗಲೇ ಹಾಸನ ಸಂಸದ ಸ್ಥಾನದಿಂದ ವಜಾಗೊಳಿಸಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ಮತ್ತೊಂದು ಶಾಕ್ ನೀಡಿದೆ.
ಬೆಂಗಳೂರು (ಸೆ.11): ರಾಜ್ಯದಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಸುಳ್ಳು ದಾಖಲೆಗಳನ್ನು ಕೊಟ್ಟು ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ ಎಂಬ ದೂರಿನ ಆಧಾರದಲ್ಲಿ, ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿತ್ತು. ಆದರೆ, ಈಗ ಅಸಿಂಧು ಆದೇಶವನ್ನು ಮೇಲ್ಮನವಿಗೆ ಹೋಗುವವರೆಗೂ 30 ದಿನಗಳ ಕಾಲ ಅಮಾನತ್ತಿನಲ್ಲಿಡುವಂತೆ ಹೈಕೋರ್ಟ್ ಮೊರೆ ಹೋಗಿದ್ದ ಅರ್ಜಿಯನ್ನು ವಜಾಗೊಳಿಸಿ ಮತ್ತೆ ಶಾಕ್ ಕೊಡಲಾಗಿದೆ.
ಹಾಸನ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್‌ನಿಂದ ಶಾಕ್ ಮೇಲೆ ಶಾಕ್ ನೀಡಲಾಗುತ್ತಿದೆ. 2019ರ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪ್ರಜ್ವಲ್ ರೇವಣ್ಣ ಲೋಕಸಭೆಗೆ ಹಾಜರಾದ ಅತ್ಯಂತ ಕಿರಿಯ ಸಂಸದರಲ್ಲಿ 3ನೇ ವ್ಯಕ್ತಿಯಾಗಿದ್ದರು. ಆದರೆ, ಚುನಾವಣೆಯಲ್ಲಿ ಸ್ಪರ್ಧಿಸಲು ಸಲ್ಲಿಕೆ ಮಾಡಲಾದ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿತ್ತು. ಈ ಪ್ರಕರಣದ ವಿಚಾರಣೆ ಮಾಡಿದ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಸುಳ್ಳು ಮಾಹಿತಿ ಕೊಟ್ಟಿದ್ದಾರೆಂಬ ಆಧಾರದ ಮೇಲೆ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು.
ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶ
ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಹೋಗುವವರೆಗೆ ಆದೇಶ ಅಮಾನತ್ತಿನಲ್ಲಿಡಲು ಮನವಿ: ಹೈಕೋರ್ಟ್ ಹೊರಡಿಸಿದ ಆದೇಶದಿಂದ ಸಂಸದ ಸ್ಥಾನದಿಂದ ಅಸಿಂಧುಗೊಂಡ ಪ್ರಜ್ವಲ್ ರೇವಣ್ಣ ಅವರು, ಹೈಕೋರ್ಟ್ ಅಸಿಂಧು ಆದೇಶಕ್ಕೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೂ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಸಂಸದ ಸ್ಥಾನದ ಅಮಾನತ್ತು ಆದೇಶವನ್ನು 30 ದಿನಗಳ ಕಾಲ ಅಮಾನತ್ತಿನಲ್ಲಿ ಇಟ್ಟರೆ, ಈ ಅವಧಿಯಲ್ಲಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ಕುರಿತು ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿದ್ದರು. ಆದರೆ, ಇದ್ಯಾವುದನ್ನೂ ಪರಿಗಣಿಸದೇ ಅನರ್ಹಗೊಂಡ ಸಂಸದ ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಪ್ರಜ್ವಲ್ ಬಳಿಕ ಈಗ ರೇವಣ್ಣ ವಿರುದ್ಧವೂ ಅನರ್ಹತೆ ಅರ್ಜಿ: ಸಮನ್ಸ್ ಜಾರಿಗೆ ಆದೇಶ
ಆಸ್ತಿ ವಿವರ ಘೋಷಿಸದೇ ಹಲವು ಅಕ್ರಮ ಮಾಡಿದ ಆರೋಪ: ಕಳೆದ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ. ಚುನಾವಣೆ ಸಂದರ್ಭದಲ್ಲಿ ಹಲವು ಅಕ್ರಮ ನಡೆಸಿದ್ದಾರೆ. ಹಾಗಾಗಿ, ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಎ.ಮಂಜು ಹಾಗೂ ಬಿಜೆಪಿ ಮುಖಂಡರೂ ಆದ ವಕೀಲ ದೇವರಾಜೇಗೌಡ ಹೈಕೋರ್ಟ್‌ಗೆ 2019ರಲ್ಲಿ ಪ್ರತ್ಯೇಕ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ಭಾಗಶಃ ಪುರಸ್ಕರಿಸಿದ್ದ ಹೈಕೋರ್ಟ್, ಪ್ರಜ್ವಲ್ ರೇವಣ್ಣ ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ತೀರ್ಮಾನಿಸಿತು. ಜತೆಗೆ, ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆ.1ರಂದು ಆದೇಶಿಸಿತ್ತು. ಇದೇ ವೇಳೆ ಚುನಾವಣಾ ಅಕ್ರಮದಲ್ಲಿ ಶಾಮೀಲಾಗಿರುವ ಕಾರಣಕ್ಕೆ ಪ್ರಜ್ವಲ್ ಅವರ ತಂದೆ ಎಚ್.ಡಿ. ರೇವಣ್ಣ ಮತ್ತು ಸಹೋದರ ಸೂರಜ್ ರೇವಣ್ಣಗೆ ನೋಟಿಸ್ ಜಾರಿಗೊಳಿಸಿತ್ತು.