ರಾಜ್ಯದ ಶೈಕ್ಷಣಿಕ ಸಂಸ್ಥೆ ಮತ್ತು ಸರ್ಕಾರಿ ಸೇವೆಗಳಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು (ಅ.12): ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗುವಂತೆ, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಹಿಂದಿನ ಸರ್ಕಾರವು ಶೈಕ್ಷಣಿಕ ಸಂಸ್ಥೆಗಳು ಹಾಗೂ ರಾಜ್ಯಾಧೀನ ಸೇವೆಗಳಲ್ಲಿ (ಸರ್ಕಾರಿ ಉದ್ಯೋಗ) ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ. 50 ರಿಂದ ಶೇ. 56 ಕ್ಕೆ ಏರಿಸಿ ಕಾಯ್ದೆ ಜಾರಿಗೊಳಿಸಿತ್ತು. ಈ ಕಾಯ್ದೆಯನ್ನು ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿತ್ರಾ ಎಂಬುವವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು.
ಶೇ. 50ರ ಮಿತಿಗಿಂತ ಹೆಚ್ಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆ
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಮೀಸಲಾತಿ ಪ್ರಮಾಣವನ್ನು ಶೇ. 50ರ ಮಿತಿಗಿಂತ ಹೆಚ್ಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ಅನ್ನು ಪುರಸ್ಕರಿಸಿರುವ ನ್ಯಾಯಾಲಯ, ಸರ್ಕಾರದ ಮೀಸಲಾತಿ ಹೆಚ್ಚಳ ಕಾಯ್ದೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಈ ತೀರ್ಪಿನಿಂದಾಗಿ ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಮಿತಿಯ ವಿಚಾರವಾಗಿ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಯಿದೆ. ಸರ್ಕಾರದ ಮುಂದಿನ ಕಾನೂನಾತ್ಮಕ ಹೆಜ್ಜೆಗಳು ಏನಿರಲಿವೆ ಎಂಬುದನ್ನು ಕಾದುನೋಡಬೇಕಿದೆ.


