ವಕೀಲರ ಗುಮಾಸ್ತರ ಕ್ಷೇಮಾಭಿವೃದ್ಧಿ ನಿಧಿ ವಿಚಾರದಲ್ಲಿ ಸರ್ಕಾರದ ನಿಷ್ಕ್ರಿಯತೆಗೆ ಹೈಕೋರ್ಟ್ ತೀವ್ರ ಅಸಮಾಧಾನ. ವಕೀಲರ ಕಲ್ಯಾಣ ನಿಧಿ ಕಾಯ್ದೆಗೆ ಅಗತ್ಯ ತಿದ್ದುಪಡಿ ತಂದು ಗುಮಾಸ್ತರಿಗೆ ಅನುಕೂಲ ಮಾಡಿಕೊಡಲು ವಿಫಲವಾದರೆ, ರಾಜ್ಯ ಕಾನೂನು ಇಲಾಖೆಯ ಕಾರ್ಯದರ್ಶಿ ಖುದ್ದು ಹಾಜರಾಗಬೇಕೆಂದು ಎಚ್ಚರಿಕೆ ನೀಡಿದೆ.
ಬೆಂಗಳೂರು (ಡಿ.2): ರಾಜ್ಯದ ವಕೀಲರ ಕಚೇರಿಗಳಲ್ಲಿ ದುಡಿಯುವ ಗುಮಾಸ್ತರ ಕ್ಷೇಮಾಭಿವೃದ್ಧಿ ನಿಧಿ ವಿಚಾರವಾಗಿ ಅಸಮಾಧಾನ ಹೊರಹಾಕಿದ್ದು, ವಕೀಲರ ಕಲ್ಯಾಣ ನಿಧಿ ಕಾಯ್ದೆಯ ಸೆಕ್ಷನ್ 27ಕ್ಕೆ ಅಗತ್ಯ ತಿದ್ದುಪಡಿ ತಾರದಿದ್ದರೆ, ಜ.9ರಂದು ರಾಜ್ಯ ಕಾನೂನು ಕಾರ್ಯದರ್ಶಿ ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಎಚ್ಚರಿಕೆ ನೀಡಿದೆ.
ಕರ್ನಾಟಕ ವಕೀಲ ಗುಮಾಸ್ತರ ಕಲ್ಯಾಣ ನಿಧಿಗೆ ಹಣ ಬರುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಕರ್ನಾಟಕ ರಾಜ್ಯಮಟ್ಟದ ವಕೀಲ ಗುಮಾಸ್ತರ ಸಂಸ್ಥೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಸೂಚನೆ ನೀಡಿದೆ.
ಅರ್ಜಿಯ ವಿಚಾರಣೆ ವೇಳೆ ಅಮಿಕಸ್ ಕ್ಯೂರಿ (ಕೋರ್ಟ್‌ಗೆ ಸಹಕರಿಸುವ ವಕೀಲರು) ಎಸ್. ಬಸವರಾಜು ಅವರು, ಇತರೆ ಹೈಕೋರ್ಟ್‌ಗಳಲ್ಲಿ ಸ್ಟ್ಯಾಂಪ್ ಮೂಲಕ ಹಣ ಸಂಗ್ರಹಿಸಿ, ಅದರಲ್ಲಿ ಸ್ವಲ್ಪ ಪ್ರಮಾಣವನ್ನು ಗುಮಾಸ್ತರ ಕ್ಷೇಮಾಭಿವೃದ್ಧಿ ನಿಧಿಗೆ ಬಳಸಲಾಗುತ್ತಿದೆ. ಕರ್ನಾಟಕದಲ್ಲಿಯೂ ಇದರ ಅಗತ್ಯವಿದೆ ಎಂದು ತಿಳಿಸಿದರು. ಅದಕ್ಕಾಗಿ ವಕೀಲರ ಕಲ್ಯಾಣ ಕಾಯ್ದೆ–1986ರ ಕಲಂ 27ಕ್ಕೆ ತಿದ್ದುಪಡಿ ತಂದು, ಪ್ರತ್ಯೇಕವಾಗಿ 5 ಅಥವಾ 10 ಸ್ಟ್ಯಾಂಪ್ ರು. ಬಳಕೆ ಜಾರಿಗೆ ತರಬೇಕು. ಈ ಕುರಿತು ಕಾಯ್ದೆಗೆ ಅಗತ್ಯ ತಿದ್ದುಪಡಿ ಮಾಡಲು ಮನವಿ ಸಲ್ಲಿಸಿದರೂ, ರಾಜ್ಯ ಸರ್ಕಾರ ಮತ್ತು ಕಾನೂನು ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೀಠದ ಗಮನಕ್ಕೆ ತಂದರು.
ಅದಕ್ಕೆ ಪ್ರತಿಕ್ರಿಯಿಸಿದ ಪೀಠ, ಗುಮಾಸ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನ್ಯಾಯಾಲಯ ಹೊರಡಿಸಿದ ಹಲವು ಆದೇಶಗಳ ಪಾಲಿಸಲು ಕೊನೆಯದಾಗಿ 3 ವಾರ ಕಾಲಾವಕಾಶ ನೀಡಲಾಗುತ್ತಿದೆ. ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದರೆ ರಾಜ್ಯ ಕಾನೂನು ಇಲಾಖೆ ಕಾರ್ಯದರ್ಶಿ ಜ.9ರಂದು ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ಎಚ್ಚರಿಸಿತು.


