* ಅಬ್ರಹಾಂ ಅರ್ಜಿಯಲ್ಲಿ ವೈಯಕ್ತಿಕ ಹಿತಾಸಕ್ತಿ* ಸಿಬಿಐ ತನಿಖೆಗೆ ವಹಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ*  ಭ್ರಷ್ಟಾಚಾರ ಆರೋಪ 

ಬೆಂಗಳೂರು(ಆ.01): ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಮತ್ತಿತರರ ವಿರುದ್ಧ ಸಿಬಿಐ ತನಿಖೆಗೆ ವಹಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿಗಣಿಸಲು ಹೈಕೋರ್ಟ್‌ ನಿರಾಕರಿಸಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ ನೇತೃತ್ವದ ವಿಭಾಗೀಯ ಪೀಠ, ಅರ್ಜಿಯಲ್ಲಿ ವೈಯಕ್ತಿಕ ಹಿತಾಸಕ್ತಿ ಅಡಗಿದೆ. ಹೀಗಾಗಿ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿಗಣಿಸಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು. ಈ ಅರ್ಜಿಯನ್ನು ಮಾರ್ಪಾಡುಗೊಳಿಸಿ, ಸಂಬಂಧಪಟ್ಟ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸುವಂತೆ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

ಹುಣಸೂರು ಕ್ಷೇತ್ರವನ್ನು ಬಿಎಸ್‌ವೈ ಸಂಪೂರ್ಣ ಕಡೆಗಣಿಸಿದ್ದಾರೆ : ಶಾಸಕ ಅಸಮಾಧಾನ

ಪ್ರಕರಣದ ವಿವರ:

ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಅವರ ಆಪ್ತರು ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಯಡಿಯೂರಪ್ಪ ಕುಟುಂಬದವರು ನಕಲಿ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳಲ್ಲಿ ಕೋಟ್ಯಂತರ ರು. ಕಿಕ್‌ಬ್ಯಾಕ್‌ ಪಡೆದಿದ್ದಾರೆ. ಆದ್ದರಿಂದ, ಈ ಬಗ್ಗೆ ತನಿಖೆ ನಡೆಸಬೇಕೆಂದು ಅಬ್ರಹಾಂ ಅವರು 2020ರ ನ.19ರಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಗೆ ದೂರು ನೀಡಿದ್ದರು. ತನಿಖೆ ನಡೆಸಿದ್ದ ಎಸಿಬಿ ಡಿ.15ರಂದು ದೂರು ಕೈಬಿಟ್ಟಿತ್ತು. ಇದನ್ನು ಪ್ರಶ್ನಿಸಿದ್ದ ಅಬ್ರಹಾಂ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. 

ಮುಖ್ಯಮಂತ್ರಿಯವರು ಸಾಂವಿಧಾನಿಕ ಹುದ್ದೆಯಲ್ಲಿರುವುದರಿಂದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಪೂರ್ವಾನುಮತಿ ಪಡೆದಿಲ್ಲ ಎಂದು ವಿಶೇಷ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.