ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಸೈದ್ಧಾಂತಿಕವಾಗಿ ಏನೇ ಭಿನ್ನಾಭಿಪ್ರಾಯ ಇದ್ರೂ ಕೊಲೆ ಮಾಡಬಾರದು, ಆರಗ

ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಈಗಾಗಲೇ ತನಿಖೆಯನ್ನ ನಡೆಸುತ್ತಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ ಎಂದ ಸಚಿವ ಆರಗ ಜ್ಞಾನೇಂದ್ರ 

Karnataka Home Minister Araga Jnanendra React on Praveen Nettaru Murder Case grg

ಬೆಂಗಳೂರು(ಜು.27):  ಮಂಗಳವಾರ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರೆಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವ ವೇಳೆ ಘಟನೆ ನಡೆದಿದೆ. ಇದು ದುರದೃಷ್ಟಕರ ಸಂಗತಿಯಾಗಿದೆ ಅಂತ ತಿಳಿಸಿದ್ದಾರೆ.

ಇಂದು(ಬುಧವಾರ) ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ ಅವರು, ಕರಾವಳಿಯಲ್ಲಿ ಬಹಳ ವರ್ಷಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಈಗಾಗಲೇ ತನಿಖೆಯನ್ನ ನಡೆಸುತ್ತಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ. ಸಹಜವಾಗಿಯೇ ಆ ಭಾಗದ ಜನ ಉದ್ವೇಗಕ್ಕೆ ಒಳಗಾಗಬೇಡಿ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಕೂಡ ಮಾತಾಡಿದ್ದೇನೆ. ಶಾಂತಿ, ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಂಡಿದ್ದೇವೆ ಅಂತ ಹೇಳಿದ್ದಾರೆ. 

ಬಿಜೆಪಿ ಮುಖಂಡನ ಬರ್ಬರ ಹತ್ಯೆ: ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಶಿಕ್ಷೆ, ಸಿಎಂ ಬೊಮ್ಮಾಯಿ

ಸೈದ್ಧಾಂತಿಕವಾಗಿ ಏನೇ ಭಿನ್ನಾಭಿಪ್ರಾಯ ಇರಬಹುದು. ಆದರೆ ಕೊಲೆಯಂತಹ ಕೃತ್ಯಗಳು ನಡೆಯಬಾರದು. ಘಟನಾ ಸ್ಥಳದಲ್ಲಿ ಸಾಕಷ್ಟು ದೊಡ್ದ ಪ್ರಮಾಣದಲ್ಲಿ ಪೋಲೀಸರಿದ್ದಾರೆ. ಶಾಂತಿ, ಸುವ್ಯವಸ್ಥೆ ಕಾಪಾಡಿಕೊಳ್ಳಲು ಕ್ರಮ ತೆಗೆದುಕೊಳ್ತಾರೆ. ಅಲ್ಲಿ ಜನರನ್ನು ಕನ್ವಿನ್ಸ್ ಮಾಡುವ ಪ್ರಯತ್ನ ಮಾಡುತ್ತೇವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆ ಅಂತ ಮಾಹಿತಿ ನೀಡಿದ್ದಾರೆ. 

ಇನ್ನು ಘಟನೆಗೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಪ್ರತಿಕ್ರಿಯೆ ನೀಡಿದ್ದು , ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಭರವಸೆ ನೀಡಿದ್ದಾರೆ. 

ಬಿಜೆಪಿ ಯುವ ಮೋರ್ಚಾ ಮುಖಂಡನ ಭೀಕರ ಹತ್ಯೆ

ಮಂಗಳೂರು: ಬಿಜೆಪಿ ಯುವ ಮುಖಂಡನೊಬ್ಬನನ್ನು ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಿನ್ನೆ(ಮಂಗಳವಾರ) ರಾತ್ರಿ ನಡೆದಿದ್ದು ಜಿಲ್ಲೆ ಉದ್ವಿಗ್ನಗೊಂಡಿದೆ. ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್‌ ಅಂಗಡಿ ನಡೆಸುತ್ತಿದ್ದ, ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿರುವ ಪ್ರವೀಣ್‌ ನೆಟ್ಟಾರು ಮೃತಪಟ್ಟವರು. ಕೆಲ ದಿನಗಳ ಹಿಂದಷ್ಟೇ ಗುಂಪು ಹಲ್ಲೆಗೊಳಗಾಗಿ ಮೃತಪಟ್ಟ ಯುವಕನೊಬ್ಬನ ಕೊಲೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎಂದು ಹೇಳಲಾಗಿದ್ದು ಆಮಾಯಕನ ಕೊಲೆಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ರಾತ್ರೋರಾತ್ರಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುವ ಮೊದಲು ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು. ಪ್ರವೀಣ್‌ ನೆಟ್ಟಾರು ಮೃತದೇಹ ಇರಿಸಲಾಗಿದ್ದ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದ.ಕ. ಎಸ್ಪಿ ಋುಷಿಕೇಶ್‌ ಸೋನಾವಣೆ ಮಂಗಳವಾರ ರಾತ್ರಿ ಭೇಟಿ ನೀಡಿದರು. ದುರ್ಘಟನೆ ಹಿನ್ನೆಲೆಯಲ್ಲಿ ಪುತ್ತೂರು, ಸುಳ್ಯ ಮತ್ತು ಕೇರಳ ಗಡಿ ಭಾಗಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತು ಏರ್ಪಡಿಸಿದ್ದಾರೆ. ಈ ಪರಿಸರದಲ್ಲಿ ನಾಕಾಬಂದಿ ಹಾಕಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಘಟನೆ ವಿವರ: 

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿರುವ ಪ್ರವೀಣ್‌ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದರು. ಮಂಗಳವಾರ ರಾತ್ರಿ ಸುಮಾರು 9 ಗಂಟೆಗೆ ಅವರ ಅಂಗಡಿ ಬಳಿ ಬೈಕ್‌ನಲ್ಲಿ ಬಂದ ಮೂವರು ಹಿಂದಿನಿಂದ ದಾಳಿ ನಡೆಸಿ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಇಲ್ಲಿಗೆ ಸಮೀಪದ ಕಳಂಜದಲ್ಲಿ ಗುಂಪು ಹಲ್ಲೆಗೊಳಗಾಗಿದ್ದ ಮಸೂದ್‌ ಎಂಬ ಯುವಕ ಚಿಕಿತ್ಸೆ ಫಲಕಾರಿ ಆಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಪ್ರಕರಣಕ್ಕೆ ಸಂಬಂಧಿಸಿ ಎಂಟು ಆರೋಪಿಗಳು ಬಂಧಿಸಲ್ಪಟ್ಟಿದ್ದು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದರ ಬೆನ್ನಿಗೇ ಈ ಘಟನೆ ನಡೆದಿರುವುದರಿಂದ ಪ್ರತೀಕಾರ ಎಂಬ ಶಂಕೆ ಮೂಡಿದೆ.
 

Latest Videos
Follow Us:
Download App:
  • android
  • ios