ಬೆಂಗಳೂರು/ಹುಬ್ಬಳ್ಳಿ [ಡಿ.19]: ಪ್ರತಿಪಕ್ಷಗಳ ವಿರೋಧದ ನಡುವೆಯೂ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನ ಖಚಿತ ಎಂಬ ಸಂದೇಶವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ರವಾನಿಸಿದ್ದಾರೆ. ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಜಾರಿ ಮಾಡುವುದು ನಿಶ್ಚಿತ. ಈ ಕುರಿತು ಅನುಮಾನವೇ ಬೇಡ. ಈ ಕುರಿತ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡು ಕೇಂದ್ರದಿಂದ ಆದೇಶ ಬಂದರೆ ಜನವರಿಯಿಂದಲೇ ಪೌರತ್ವ ಕಾಯಿದೆ ಜಾರಿ ಮಾಡಲು ಕ್ರಮ ಕೈಗೊಳ್ಳುತ್ತೇವೆ. ದೇಶಕ್ಕೆ ಮಾದರಿಯಾಗಿ ಈ ಕಾಯ್ದೆ ಅನುಷ್ಠಾನಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕರ್ನಾಟಕದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಅನುಷ್ಠಾನ ಮಾಡಲು ನೂರಕ್ಕೆ ನೂರರಷ್ಟುಬದ್ಧರಾಗಿದ್ದೇವೆ. ಈ ಬಗ್ಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತೇವೆ. ಯಾವುದೇ ಗೊಂದಲಗಳಿಗೂ ಅವಕಾಶ ನೀಡುವುದಿಲ್ಲ. ಕಾಯಿದೆ ಅನುಷ್ಠಾನದಲ್ಲಿ ಮಾದರಿಯಾಗಿ ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪೌರತ್ವ ತಿದ್ದುಪಡಿ ಕಾಯಿದೆ ಅನುಷ್ಠಾನಕ್ಕೆ ಪಂಜಾಬ್‌, ಪಶ್ಚಿಮ ಬಂಗಾಳ, ಕೇರಳ ಸೇರಿ ಕಾಂಗ್ರೆಸ್‌, ಎಡಪಕ್ಷಗಳು ಹಾಗೂ ತೃಣಮೂಲ ಕಾಂಗ್ರೆಸ್‌ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಂತೂ ರಾಜ್ಯದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ‘ನನ್ನ ಸರ್ಕಾರ ವಜಾಗೊಳಿಸಿ ಪೌರತ್ವ ಕಾಯಿದೆ ಅನುಷ್ಠಾನಗೊಳಿಸಿ’ ಎಂದು ಸವಾಲು ಹಾಕಿದ್ದಾರೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಜನವರಿಯಿಂದಲೇ ಪೌರತ್ವ ಕಾಯಿದೆ ಅನುಷ್ಠಾನಗೊಳಿಸುವುದಾಗಿ ಯಡಿಯೂರಪ್ಪ ನೀಡಿರುವ ಹೇಳಿಕೆ ತೀವ್ರ ಮಹತ್ವ ಪಡೆದುಕೊಂಡಿದೆ.

ಏತನ್ಮಧ್ಯೆ, ಪೌರತ್ವ ತಿದ್ದುಪಡಿ ಕಾಯಿದೆ ಅನುಷ್ಠಾನಗೊಂಡರೆ ಕರ್ನಾಟಕ ಹೊತ್ತಿ ಉರಿಯಲಿದೆ ಎಂಬ ಮಾಜಿ ಸಚಿವ ಯು.ಟಿ. ಖಾದರ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಬಿ.ಎಸ್‌. ಯಡಿಯೂರಪ್ಪ ನಿರಾಕರಿಸಿದ್ದಾರೆ.