ಉಜ್ಜಿನಿ ಬಳಿ 40 ಟಿಎಂಸಿ ಸಾಮರ್ಥ್ಯದ ಅಣೆಕಟ್ಟು ನಿರ್ಮಿಸಲು ಮಹಾರಾಷ್ಟ್ರ ಸಿದ್ಧತೆ ನಡೆಸಿದೆ ಎನ್ನಲಾದ ಯೋಜನೆಗೆ ಸಚಿವ ಎಂ.ಬಿ. ಪಾಟೀಲ್ ವಿರೋಧ ವ್ಯಕ್ತಪಡಿಸಿದ್ದಾರೆ. ಕೃಷ್ಣಾ ನದಿ ನೀರಿನ ಹಂಚಿಕೆ ಮತ್ತು ಕರ್ನಾಟಕದ ಹಿತಾಸಕ್ತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮಹಾರಾಷ್ಟ್ರ ಸರ್ಕಾರವು ಉಜ್ಜಿನಿ ಬಳಿ 40 ಟಿಎಂಸಿ ಸಾಮರ್ಥ್ಯದ ಅಣೆಕಟ್ಟು ಕಟ್ಟಲು ಮುಂದಾಗುತ್ತಿದೆ ಎನ್ನುವ ಸುದ್ದಿ ಇದೆ. ಇದು ಕೃಷ್ಣಾ ನದಿ ನೀರಿನ ವಿಚಾರದಲ್ಲಿ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೆ ಅನ್ಯಾಯ ಮಾಡಿದಂತಾಗುತ್ತದೆ. ಈ ಯೋಜನೆ ವಿರುದ್ಧ ಕೇಂದ್ರ ಜಲ ಸಂಪನ್ಮೂಲ ಸಚಿವರು ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮಹಾರಾಷ್ಟ್ರದ ತೀರ್ಮಾನ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿಗೆ ವಿರುದ್ಧವಾಗಿದೆ. ಇಂತಹ ಯೋಜನೆಗೆ ವಿಶ್ವಬ್ಯಾಂಕ್ ಹೇಗೆ ಹಣ ಕೊಡುತ್ತದೆ ಎನ್ನುವ ಪ್ರಶ್ನೆ ಬರುತ್ತದೆ ಎಂದರು.

ಕೇಂದ್ರ ಕೈಗಾರಿಕೆ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯಕ್ಕೆ ವಾಹನ ಪರೀಕ್ಷಾ ಮತ್ತು ತರಬೇತಿ ಕೇಂದ್ರ ತರುತ್ತಿರುವುದು ಸ್ವಾಗತಾರ್ಹ. ಅವರಿಗೆ ರಾಜ್ಯದ ಹಿತಾಸಕ್ತಿ ಮುಖ್ಯವಾಗಿದ್ದರೆ ನಾಲ್ಕು ಸೆಮಿಕಂಡಕ್ಟರ್ ಕಂಪನಿಗಳನ್ನು ತರಬೇಕು. ಆದರೆ ಕೇಂದ್ರ ಸರ್ಕಾರ ಇಲ್ಲಿಗೆ ಬರಲು ಆಸಕ್ತಿ ತೋರುವ ಕಂಪನಿಗಳಿಗೆ ಪಿಎಲ್ಐ ಆಸೆ ತೋರಿಸಿ ಬಿಜೆಪಿ ಆಡಳಿತದ ಅಸ್ಸಾಂ, ಮಹಾರಾಷ್ಟ್ರ, ಗುಜರಾತ್ ಮುಂತಾದ ರಾಜ್ಯಗಳಿಗೆ ಕಳುಹಿಸುತ್ತಿದೆ. ಇದರ ಬಗ್ಗೆ ದನಿ ಎತ್ತಲಿ ಎಂದರು.

ಉಜನಿ ಡ್ಯಾಂಗೆ ಕೃಷ್ಣಾ ನದಿ ನೀರು ಬಿಡಬೇಡಿ

ವಿಜಯಪುರ: ಕೃಷ್ಣಾ ನದಿ ಉಗಮ ಸ್ಥಾನ ಮಹಾರಾಷ್ಟ್ರದ ಬಳಿ ಹಾಯ್ದು ಹೋಗಿರುವ ಕೃಷ್ಣಾ ನದಿ ನೀರನ್ನು ಭೀಮ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಉಜನಿ ಅಣೆಕಟ್ಟಿಗೆ 40 ಟಿಎಂಸಿ ನೀರನ್ನು ಕೊಂಡೊಯ್ಯಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಯಾವುದೇ ಕಾರಣಕ್ಕೂ ಕೃಷ್ಣ ನದಿಯಿಂದ ನೀರನ್ನು ಉಜಿನಿ ಆಣೆಕಟ್ಟಿಗೆ ಸಾಗಿಸಬಾರದು. ಒಂದು ವೇಳೆ ಕಾನೂನು ಉಲ್ಲಂಘಿಸಿ ನೀರನ್ನು ತೆಗೆದುಕೊಂಡು ಹೋದರೆ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ರೈತ ಮುಖಂಡರಾದ ಅರವಿಂದ ಕುಲಕರ್ಣಿ ಹಾಗೂ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಸ್.ವಿ.ಪಾಟೀಲ ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಗರದ ಕಸಾಪ ಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿಗಳು ಸೆಪ್ಟೆಂಬರ್‌ 9ರಂದು ಮುಂಬೈಯಲ್ಲಿ ನಡೆದ ಇಂಡಿಯಾ ಟುಡೇ ಕಾನ್ ಕ್ಲೇವ್ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಕೃಷ್ಣಾ ನದಿ ನೀರನ್ನು ಮರಾಠವಾಡದ ಎರಡು ಜಿಲ್ಲೆಗಳು ಹಾಗೂ ಸಾಂಗ್ಲಿ ಮತ್ತು ಸೋಲಾಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ನೀರನ್ನು ಬಳಸಲು ಉದ್ದೇಶಿಸಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿದ್ದಾರೆ. ಇದು ಕರ್ನಾಟಕ ಸರ್ಕಾರಕ್ಕೆ ಮಾಹಿತಿ ಇರದಿದ್ದರೆ ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ?. ರಾಜ್ಯ ಸರ್ಕಾರ ನಿದ್ರಾವಸ್ಥೆಯಲ್ಲಿ ಇದ್ದಂತೆ ಕಾಣುತ್ತಿದ್ದು, ಎಚ್ಚೆತ್ತುಕೊಂಡು ಈ ಯೋಜನೆಗೆ ತಡೆ ಹಿಡಿಯಬೇಕು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಬಳಿ ಎಲ್ಲ ಸಚಿವರನ್ನು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿ ಬಳಿ ನಿಯೋಗ ತೆಗೆದುಕೊಂಡು ಹೋಗಿ ನೀರು ತಿರುವ ಯೋಜನೆಯನ್ನು ತಡೆಹಿಡಿಯುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು. ಇಲ್ಲದಿದ್ದರೆ ಉತ್ತರ ಕರ್ನಾಟಕ ಭಾಗದ ರೈತರು ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ವಿಠ್ಠಲ ಬಿರಾದಾರ, ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಮಹಾದೇವಪ್ಪ ತೇಲಿ, ತಾಳಿಕೋಟಿ ತಾಲೂಕು ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ಉಪಾಧ್ಯಕ್ಷ ರಾಮನಗೌಡ ಹಾದಿಮನಿ, ಅಶೋಕ ಉಪ್ಪಲದಿನ್ನಿ ಇತರರು ಇದ್ದರು.