ಸಚಿವ ಪ್ರಿಯಾಂಕ್ ಖರ್ಗೆಯವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದು,  ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಹಾಗೂ ಇತರೆ ಸಂಘಟನೆಗಳ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಬೇಕು. ಹೀಗಾಗಿ, ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿ, ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ಬೆಂಗಳೂರು (ಅ.16): ರಾಜ್ಯ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಇನ್ನಿತರ ಸಂಘ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಸಚಿವ ಪ್ರಿಯಾಂಕ್ ಖರ್ಗೆ (Priyank Kharge)ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (CM of Karnataka Siddaramaiah) ಅವರಿಗೆ ಮತ್ತೊಂದು ಮಹತ್ವದ ಪತ್ರ ಬರೆದಿದ್ದಾರೆ.

ಸರ್ಕಾರಿ ನೌಕರರು (Karnataka Government employees) ಯಾವುದೇ ರಾಜಕೀಯೇತರ ಸಂಘಟನೆಗಳ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸ್ಪಷ್ಟ ನಿರ್ಬಂಧಗಳಿದ್ದರೂ, ಇತ್ತೀಚಿನ ದಿನಗಳಲ್ಲಿ ಅಧಿಕಾರಿಗಳು ಮತ್ತು ನೌಕರರು ನಿಯಮಗಳನ್ನು ಉಲ್ಲಂಘಿಸುತ್ತಿರುವುದನ್ನು ಗಮನಿಸಿ ಸಚಿವರು ಈ ಕ್ರಮಕ್ಕೆ ಮುಂದಾಗಿದ್ದಾರೆ.

ನಡತೆ ನಿಯಮಗಳ ಸ್ಪಷ್ಟ ಉಲ್ಲೇಖ:

ತಮ್ಮ ಪತ್ರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ, 1966 ಅನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದಾರೆ. ಈ ನಿಯಮಗಳಡಿ, ನಿಯಮ 5(1)ರ ಪ್ರಕಾರ ಹಲವು ನಿಬಂಧನೆಗಳು ಈಗಾಗಲೇ ಜಾರಿಯಲ್ಲಿವೆ.

ಆ ನಿಯಮಗಳ ಪ್ರಕಾರ:

ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ. ಅಥವಾ ಅವುಗಳೊಂದಿಗೆ ಯಾವುದೇ ರೀತಿಯ ಸಂಬಂಧ ಹೊಂದಿರತಕ್ಕದ್ದಲ್ಲ. ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ. ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ.

ಈ ನಿಯಮಗಳು ಬಹಳ ಹಿಂದೆಯೇ ಜಾರಿಯಲ್ಲಿದ್ದರೂ, ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮ, ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಭಾಗವಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.

ಸುತ್ತೋಲೆ ಹೊರಡಿಸಲು ಆಗ್ರಹ:

ಸರ್ಕಾರಿ ನೌಕರರ ನಡತೆ ನಿಯಮಗಳ ಉಲ್ಲಂಘನೆಯು ಆಡಳಿತದ ತಟಸ್ಥತೆ ಮತ್ತು ನಿಷ್ಪಕ್ಷಪಾತಕ್ಕೆ ಧಕ್ಕೆ ತರುತ್ತದೆ ಎಂದು ಸಚಿವರು ತಮ್ಮ ಪತ್ರದಲ್ಲಿ ಹೇಳಿದ್ದಾರೆ. ರಾಜ್ಯದ ಆಡಳಿತ ಯಂತ್ರವು ಜಾತ್ಯಾತೀತ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ಆಧಾರದ ಮೇಲೆ ಕಾರ್ಯನಿರ್ವಹಿಸಬೇಕು. ಸರ್ಕಾರಿ ನೌಕರರು ಯಾವುದೇ ನಿರ್ದಿಷ್ಟ ರಾಜಕೀಯ ಅಥವಾ ರಾಜಕೀಯೇತರ ಸಿದ್ಧಾಂತದ ಸಂಘಟನೆಗಳ ಚಟುವಟಿಕೆಗಳಲ್ಲಿ ಭಾಗವಹಿಸುವುದು ನಿಯಮ ಉಲ್ಲಂಘನೆಯಾಗಲಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ, ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಆದೇಶ ಹೊರಡಿಸುವಂತೆ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿ ಈ ಚಟುವಟಿಕೆಗಳಲ್ಲಿ ಭಾಗವಹಿಸುವ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಕುರಿತು ಸ್ಪಷ್ಟ ನಿರ್ದೇಶನ ನೀಡುವಂತೆ ಕೋರಿ ಸಚಿವರು ತಕ್ಷಣವೇ ಸುತ್ತೋಲೆ (Circular) ಹೊರಡಿಸಲು ಆಗ್ರಹಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರ ಈ ಪತ್ರವು ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ.

ಈ ಹಿಂದೆ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಬೈಠಕ್ ನಿಷೇಧಿಸುವಂತೆ ಪತ್ರ:

ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಹಿಂದೆ ಆರ್‌ಎಸ್‌ಎಸ್ ಸಂಘಟನೆಗಳಿಂದ ಸರ್ಕಾರಿ ಸ್ಥಳಗಳಲ್ಲಿ ಶಾಖೆಗಳನ್ನು ಹೊಂದಿವೆ. ಸರ್ಕಾರಿ ಶಾಲಾ-ಕಾಲೇಜು ಅಥವಾ ಇತರೆ ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ತನ್ನ ಪಥಸಂಚಲನ ಹಾಗೂ ಬೈಠಕ್‌ಗಳನ್ನು ಮಾಡಿಕೊಂಡು ಬರುತ್ತಿದೆ. ಈವರೆಗೆ ಆರ್‌ಎಸ್‌ಎಸ್ ಎಂದಿಗೂ ದೇಶದ ಧ್ವಜವನ್ನೂ ಅಳವಡಿಕೆ ಮಾಡಿಕೊಂಡಿಲ್ಲ. ದೇಶಕ್ಕೆ ಗೌರವ ಕೊಡದ ಸಂಸ್ಥೆಗೆ ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಿಎಂಗೆ ಪತ್ರ ಬರೆದಿದ್ದರು.