ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಜೂ.15ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆಯಾಗಲಿದ್ದು, ಹವಾಮಾನ ಇಲಾಖೆಯು ನದಿ ತೀರದ ಜನರಿಗೆ ಹಾಗೂ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.

ಬೆಂಗಳೂರು (ಜೂ.11): ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಜೂ.15ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಮುಂದಿನ 48 ಗಂಟೆ ಬೆಂಗಳೂರಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಸೇರಿ ಹಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ. 

ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು-ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನದಿಗಳು, ಹಳ್ಳ-ಕೊಳ್ಳಗಳು ತುಂಬುವ ಸಾಧ್ಯತೆ ಇದೆ.

ಹವಾಮಾನ ಇಲಾಖೆ ಎಚ್ಚರಿಕೆ ಏನು?

ನದಿ ಹಾಗೂ ಹಳ್ಳ, ಕೊಳ್ಳ ಸಮೀಪ ವಾಸಿಸುವ ಜನರು ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ತೆರಳುವ ಮುನ್ನ ಸ್ಥಳೀಯ ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.