ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಜೊತೆಗೆ ಕರಾವಳಿಯ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಇದೆ. ಈ ಹಿನ್ನೆಲೆಯಲ್ಲಿ ಆ.28ರಂದು ಉತ್ತರ ಕನ್ನಡ, ಶಿವಮೊಗ್ಗದ ಕೆಲವು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

ಬೆಂಗಳೂರು/ಶಿವಮೊಗ್ಗ/ಉತ್ತರ ಕನ್ನಡ (ಆ.27): ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ, ಆಗಸ್ಟ್ 28ರಂದು ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ರಜೆ ಘೋಷಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಮತ್ತು ಸಾಗರ ತಾಲೂಕಿನ ತಹಶೀಲ್ದಾರ್ ಅವರುಗಳು ಪ್ರತ್ಯೇಕವಾಗಿ ಆದೇಶ ಹೊರಡಿಸಿದ್ದಾರೆ. ನಾಳೆ ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಇರಲಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಉತ್ತರ ಕನ್ನಡ ಜಿಲ್ಲೆಗೂ ಶಾಲಾ-ಕಾಲೇಜು ರಜೆ:

ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಿರುವ ಕಾರಣ ಶಾಲಾ-ಕಾಲೇಜು ಸೇರಿದಂತೆ ಎಲ್ಲ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದ್ದು, ಹಳ್ಳ-ಕೊಳ್ಳ, ನದಿ ಹಾಗೂ ಸಮುದ್ರ ತೀರಗಳ ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಲಾಗಿದೆ.

ರಾಜ್ಯದಲ್ಲಿ ಮಳೆಯ ಮುನ್ಸೂಚನೆ

ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರೀ ಮಳೆ ಹಾಗೂ ಒಂದೆರಡು ಕಡೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಕೆಲವು ಕಡೆ ಭಾರೀ ಮಳೆಯಾಗಲಿದೆ. ಇನ್ನು ಈ ಮೂರೂ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯಿಂದ ಇಂದು ರೆಡ್ ಅಲರ್ಟ್ ಹಾಗೂ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸುಮಾರು 115 ಮಿ.ಮೀಟರ್‌ಗಿಂದ ಹೆಚ್ಚು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ಉತ್ತರ ಒಳನಾಡು: ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿ (40-50 ಕಿಮೀ ವೇಗ) ಬೀಸುವ ಸಾಧ್ಯತೆಯಿದೆ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು: ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಬಿರುಗಾಳಿ ಇರಲಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಾರ್ವಜನಿಕರು ಮಳೆಯ ಸಂದರ್ಭದಲ್ಲಿ ಎಚ್ಚರ ವಹಿಸಬೇಕೆಂದು ಜಿಲ್ಲಾಡಳಿತಗಳು ಮನವಿ ಮಾಡಿವೆ. ಪ್ರವಾಹ ಪೀಡಿತ ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.