ಬೆಂಗಳೂರು (ಏ. 21): ಹಿಂದಿನ ಸರ್ಕಾರ ಪ್ರಾರಂಭಿಸಿದ್ದ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳ ಆದೇಶವನ್ನು ಕೈಬಿಡಬೇಕು ಹಾಗೂ ಹೊಸದಾಗಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಎಲ್ಲ ಪ್ರಸ್ತಾವನೆಗಳನ್ನು ಪುನರ್‌ ಪರಿಶೀಲಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ಸರ್ಕಾರವನ್ನು ಒತ್ತಾಯಿಸಿದೆ.

ಸೋಮವಾರ ಈ ಕುರಿತು ಪರಿಷತ್‌ ಅಧ್ಯಕ್ಷ ಡಾ.ಮನು ಬಳಿಗಾರ್‌ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಮಾತೃಭಾಷೆ ಬೋಧನೆ ಕುರಿತು ಆಂಧ್ರಪ್ರದೇಶ ಹೈಕೋರ್ಟ್‌ ನೀಡಿರುವ ತೀರ್ಪಿನ ಕುರಿತು ಉಲ್ಲೇಖಿಸಿ ರಾಜ್ಯದಲ್ಲಿಯೂ ಕನ್ನಡ ಭಾಷೆ ಶಾಲೆಗಳ ಬಲವರ್ಧನೆಗೆ ಸರ್ಕಾರ ಕ್ರಮ ವಹಿಸಬೇಕು. ಹೆಚ್ಚುತ್ತಿರುವ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಅನುಮತಿ ನೀಡುವ ಬಗ್ಗೆಯೂ ಸರ್ಕಾರ ಪುನರ್‌ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ ಸಡಿಲ ಇಲ್ಲ: ರಾಜ್ಯ ಸರ್ಕಾರದಿಂದ ಕಠಿಣ ತೀರ್ಮಾನ!

2019ರಲ್ಲಿ ಆಂಧ್ರ ಸರ್ಕಾರ ರಾಜ್ಯದ ಎಲ್ಲ ತೆಲುಗು ಮಾಧ್ಯಮ ಶಾಲೆಗಳನ್ನು ಆಂಗ್ಲ ಮಾಧ್ಯಮ ಶಾಲೆಗಳಾಗಿ ಪರಿವರ್ತಿಸುವ ಆದೇಶ ಹೊರಡಿಸಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ ಅಲ್ಲಿನ ಹೈಕೋರ್ಟ್‌ನಲ್ಲಿ ಪಿಐಎಲ್‌ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಕೋರ್ಟ್‌ ನೀಡಿರುವ ತೀರ್ಪಿನಲ್ಲಿ 1ರಿಂದ 8ನೇ ತರಗತಿವರೆಗಿನ ಶಾಲೆಗಳಲ್ಲಿ ಬೋಧನಾ ಮಾಧ್ಯಮ ಮಾತೃಭಾಷೆಯಲ್ಲಿರಬೇಕು ಎಂಬುದನ್ನು ಸ್ಪಷ್ಟಪಡಿಸಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹಿಂದಿನ ಸರ್ಕಾರ ತೀರ್ಮಾನವನ್ನು ಅಸಿಂಧುಗೊಳಿಸಿ ಹಿಂದಿನ ಆದೇಶವನ್ನು ರದ್ದುಗೊಳಿಸಬೇಕು. ಹಾಗೆಯೇ ಕನ್ನಡ ಮಾಧ್ಯಮದ ಶಾಲೆಗಳನ್ನು ಬಲವರ್ಧನೆಗೊಳಿಸುವ ಜತೆಗೆ ಆಂಗ್ಲ ಭಾಷೆಯನ್ನು ಒಂದು ಭಾಷೆಯನ್ನಾಗಿ ಪ್ರಭುತ್ವದ ಮಟ್ಟಕ್ಕೆ ಕಲಿಸುವ ಬಗ್ಗೆ ಗಂಭೀರವಾಗಿ ಸರ್ಕಾರ ಚಿಂತನೆ ನಡೆಸಬೇಕು ಎಂದು ಮನು ಬಳಿಗಾರ್‌ ಒತ್ತಾಯಿಸಿದ್ದಾರೆ.