ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಕರ್ನಾಟಕದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಕೇಂದ್ರ ಸರ್ಕಾರವು ₹1,178.20 ಕೋಟಿ ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರು ರಾಜ್ಯಸಭೆಯಲ್ಲಿ ಈ ಮಾಹಿತಿಯನ್ನು ನೀಡಿದ್ದು, ವಿವಿಧ ವರ್ಷಗಳಲ್ಲಿ ರಾಜ್ಯಕ್ಕೆ ಹಂಚಿಕೆಯಾದ ಅನುದಾನದ ವಿವರಗಳನ್ನು ಒದಗಿಸಿದ್ದಾರೆ.
ನವದೆಹಲಿ: ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಕರ್ನಾಟಕದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಯೋಜನೆಯಡಿ ₹1,178.20 ಕೋಟಿವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. 2023-24ರಲ್ಲಿ ₹421.08 ಕೋಟಿ, 2024-25ರಲ್ಲಿ ₹422.90 ಕೋಟಿ ಮತ್ತು 2025-26ರಲ್ಲಿ ₹334.22 ಕೋಟಿ ಕೇಂದ್ರದ ಪಾಲನ್ನು ರಾಜ್ಯಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ನೀಡಿದ ಅನುದಾನದ ಕುರಿತು ರಾಜ್ಯಸಭೆಯಲ್ಲಿ ಕೇಳಲಾದ ಚುಕ್ಕೆಗುರುತಿಲ್ಲದ ಪ್ರಶ್ನೆಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಅವರು ಈ ಉತ್ತರ ನೀಡಿದ್ದಾರೆ.
2017ರಲ್ಲೇ ಮಾರ್ಗಸೂಚಿ
ಪರಿಶಿಷ್ಟ ಜಾತಿಗಳ ಅಭಿವೃದ್ಧಿ ಕ್ರಿಯಾ ಯೋಜನೆ (ಡಿಎಪಿಎಸ್‌ಸಿ) ಕುರಿತೂ ಮಾಹಿತಿ ನೀಡಿರುವ ಅಠಾವಳೆ, ʻಡಿಎಪಿಎಸ್‌ಸಿʼ ಅಡಿ ಹಣವನ್ನು ಮೀಸಲಿಡಲು ನೀತಿ ಆಯೋಗವು 2017ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದು ತಿಳಿಸಿದ್ದಾರೆ.
. ಅದರ ಪ್ರಕಾರ ಜವಾಬ್ದಾರಿಯುತ ಪ್ರತಿ ಸಚಿವಾಲಯ/ಇಲಾಖೆಯು ತನ್ನ ಆಯಾ ಯೋಜನೆಗಳ ಮೂಲಕ ಪರಿಶಿಷ್ಟ ಜಾತಿಗಳ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗಾಗಿ ʻಡಿಎಪಿಎಸ್‌ಸಿʼ ಅಡಿ ಅನುದಾನ ಮಂಜೂರು ಮಾಡುತ್ತದೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ತಿಳಿಸಿದರು.


