ಬೆಂಗಳೂರು(ಡಿ.09): ಸಾಕಷ್ಟು ಕುತೂಹಲ ಮೂಡಿಸಿರುವ ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಯಕವನ್ನು ಸರ್ಕಾರ ಗುರುವಾರ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ.

ಮಂಗಳವಾರ ಮಧ್ಯಾಹ್ನ ನಡೆದ ವಿಧಾನಸಭೆಯ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಪ್ರತಿಪಕ್ಷದ ನಾಯಕರು ಗೋಹತ್ಯೆ ನಿಷೇಧ ತಿದ್ದುಪಡಿ ಸೇರಿದಂತೆ ವಿವಾದಾತ್ಮಕ ವಿಧೇಯಕಗಳನ್ನು ಪ್ರಸಕ್ತ ಅಧಿವೇಶನದಲ್ಲಿ ಮಂಡಿಸದಂತೆ ಒತ್ತಾಯಿಸಿದ್ದರೂ ಆಡಳಿತಾರೂಢ ಬಿಜೆಪಿ ನಾಯಕರು ಅದನ್ನು ಕಡೆಗಣಿಸಿ ಮಂಡನೆಗೆ ಸಜ್ಜಾಗಿದ್ದಾರೆ.

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಅಂಗೀಕಾರ: ಜೆಡಿಎಸ್-ಬಿಜೆಪಿ ಮೈತ್ರಿಗೆ ನಾಂದಿ...!

ವಿಧೇಯಕ ಮಂಡಿಸಲು ಕಳೆದ ಹಲವು ದಿನಗಳಿಂದ ತೆರೆಮರೆಯಲ್ಲಿ ಸಿದ್ಧತೆ ನಡೆಸಿದ್ದ ಪಶುಸಂಗೋಪನಾ ಖಾತೆ ಅಧಿಕಾರಿಗಳು ಮಂಗಳವಾರ ಸಂಜೆ ಕರಡನ್ನು ಸಿದ್ಧಪಡಿಸಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕಳುಹಿಸಿದ್ದರು. ಅಲ್ಲಿಂದ ಒಪ್ಪಿಗೆಯಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗೆ ರವಾನೆಯಾಗಿದೆ. ಮಂಗಳವಾರ ತಡರಾತ್ರಿ ಪ್ರಕಟವಾದ ಬುಧವಾರದ ಕಾರ್ಯಕಲಾಪಗಳ ಪಟ್ಟಿಯಲ್ಲಿ ಇದು ನಮೂದಾಗಿಲ್ಲ. ಹೀಗಾಗಿ, ಪ್ರಸಕ್ತ ಅಧಿವೇಶನದ ಕೊನೆಯ ದಿನವಾದ ಗುರುವಾರ ಮಂಡಿಸುವ ಸಂಭವವಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಪಶುಸಂಗೋಪನಾ ಸಚಿವ ಪ್ರಭು ಚವಾಣ್‌ ಅವರು ಕಳೆದ ವಾರವಷ್ಟೇ ಹಿರಿಯ ಅಧಿಕಾರಿಗಳೊಂದಿಗೆ ಗುಜರಾತ್‌ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ವಿಸ್ತೃತ ಅಧ್ಯಯನ ಮಾಡಿ ಬಂದಿದ್ದರು. ಆ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಿರುವ ಕ್ರಮಗಳನ್ನು ಇಲ್ಲಿಯೂ ಅಳವಡಿಸಿಕೊಳ್ಳಲು ಉದ್ದೇಶಿಸಲಾಗಿದೆ.

ಲವ್ ಜಿಹಾದ್; 7 ತಿಂಗಳು ದೈಹಿಕ ಸಂಪರ್ಕ.. ಮದುವೆ ಎಂದಾಗ ಬಯಲಾದ ಬಂಡವಾಳ!

ಈ ಹಿಂದೆ ತಂದಿದ್ದ ಕಾಯ್ದೆಗಿಂತ ಕಠಿಣವಾದ ಕ್ರಮಗಳನ್ನು ತಿದ್ದುಪಡಿ ವಿಧೇಯಕದಲ್ಲಿ ಸೇರಿಸಲಾಗುವುದು ಎಂದು ಸ್ವತಃ ಸಚಿವ ಪ್ರಭು ಚವಾಣ್‌ ಅವರೇ ಹೇಳಿದ್ದಾರೆ. ಇದಕ್ಕಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಸರ್ಕಾರದ ಉನ್ನತ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಶಿಕ್ಷೆ ಮತ್ತು ದಂಡದ ಮೊತ್ತವನ್ನು ಹೆಚ್ಚಿಸುವುದರ ಜೊತೆಗೆ ಗುಜರಾತ್‌ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗಿಂತ ಪರಿಣಾಮಕಾರಿಯಾಗಿ ಈ ಕಾಯ್ದೆಯನ್ನು ಕರ್ನಾಟಕದಲ್ಲಿ ಅನುಷ್ಠಾನಗೊಳಿಸಲು ಆಡಳಿತಾರೂಢ ಬಿಜೆಪಿ ನಾಯಕರು ಪ್ರಯತ್ನ ನಡೆಸಿದ್ದಾರೆ.