ಕೇರಳದ ಕೊಟ್ಟಿಯೂರಿಗೆ ತೆರಳುತ್ತಿದ್ದ ಕರ್ನಾಟಕದ ಪ್ರವಾಸಿಗರಿದ್ದ ಟೆಂಪೊ ಟ್ರಾವೆಲರ್ ಕಣ್ಣೂರು ಬಳಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ವಯನಾಡ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಣ್ಣೂರು: ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಟ್ಟಿಯೂರಿಗೆ ತೆರಳುತ್ತಿದ್ದ ಪ್ರವಾಸಿಗರ ಟೆಂಪೊ ಟ್ರಾವೆಲರ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗುರುವಾರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ವಾಹನದಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು ನೆರೆಯ ವಯನಾಡ್ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಹಾಗೂ ಆಂಬ್ಯುಲೆನ್ಸ್‌ಗೆ ಮಾಹಿತಿ ನೀಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಂಬಾಯತ್ತೋಡ್ ಬಳಿ ಸಂಭವಿಸಿದ ದುರಂತ

ಕಣ್ಣೂರು ಜಿಲ್ಲೆಯ ಗಡಿ ಭಾಗದ ಸಮೀಪವಿರುವ ಆಂಬಾಯತ್ತೋಡ್ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟೆಂಪೊ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ವಾಹನವು ಜಖಂಗೊಂಡಿದ್ದು ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಹಾಗೂ ಹಾದಿಹೋಕರು ತಕ್ಷಣವೇ ಧಾವಿಸಿ ಬಂದು, ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡರು.

ಗಾಯಾಳುಗಳು ಆಸ್ಪತ್ರೆಗೆ ದಾಖಲು

ಅಪಘಾತದಲ್ಲಿ ಗಾಯಗೊಂಡ ಎಲ್ಲ 20 ಮಂದಿಯನ್ನು ತಕ್ಷಣವೇ ರಕ್ಷಿಸಿ, ಚಿಕಿತ್ಸೆಗಾಗಿ ನೆರೆಯ ವಯನಾಡ್ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಆಸ್ಪತ್ರೆಯಲ್ಲಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಈ ಟೆಂಪೋ ಕರ್ನಾಟಕದಿಂದ ಕೊಟ್ಟಿಯೂರು ಕಡೆ ಪ್ರಯಾಣ ಮಾಡುತ್ತಿತ್ತು. ಹೀಗಾಗಿ ಗಾಯಗೊಂಡವರು ಕರ್ನಾಟಕದ ಯಾವ ಜಿಲ್ಲೆಯವರು ಎಂಬ ಮಾಹಿತಿ ಲಭ್ಯವಾಗಿಲ್ಲ.