Karnataka weather forecast today: ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿರುವುದರಿಂದ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು-ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ, ಯಾವ್ಯಾವ ಜಿಲ್ಲೆಗಳಲ್ಲಿ ಮಳೆ?

ಬೆಂಗಳೂರು (ಅ.9): ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿರುವುದರಿಂದ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ ಕೊನೆಯ ವಾರ ಪಶ್ಚಿಮ ಕರಾವಳಿ ಮೂಲಕ ಪ್ರವೇಶಿಸಿದ್ದ ಮುಂಗಾರು, ಇದೀಗ ವಾಪಸ್‌ ಬರುತ್ತಿದೆ. ಹೀಗಾಗಿ, ಒಡಿಶಾದಿಂದ ರಾಜ್ಯದವರೆಗೆ ಮಳೆ ಮಾರುತಗಳು ವ್ಯಾಪಸಕವಾಗಿರುವ ಪರಿಣಾಮ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಅಕ್ಟೋಬರ್ 11ರ ವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ, ಬೆಂಗಳೂರಿಗಿದೆಯಾ ರಿಲೀಫ್?

ಗುರುವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಹಾಗೂ ತುಮಕೂರು, ಶುಕ್ರವಾರಕ್ಕೆ ಕೋಲಾರ, ಕೊಡಗು, ಹಾಸನ, ಚಿಕ್ಕಮಂಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.