KEA written exam schedule ನವೆಂಬರ್ 20 ರಿಂದ 22 ರವರೆಗೆ ವಿವಿಧ ಇಲಾಖೆಗಳ ಹುದ್ದೆಗಳಿಗೆ ಕೆಇಎ ಲಿಖಿತ ಪರೀಕ್ಷೆಗಳನ್ನು ನಡೆಸಲಿದೆ. ಪ್ರಾಂಶುಪಾಲರು, ಕಾರಾಗೃಹ ಮತ್ತು ಎಸ್ಡಿಎ ಹುದ್ದೆಗಳಿಗೆ ಪರೀಕ್ಷೆಗಳು ನಡೆಯಲಿದ್ದು, ವೆಬ್ ಕಾಸ್ಟಿಂಗ್ ಮೂಲಕ ತೀವ್ರ ನಿಗಾ ವಹಿಸಲಾಗಿದೆ.
ಬೆಂಗಳೂರು (ನ.20): ವಿವಿಧ ಇಲಾಖೆಗಳ ಹುದ್ದೆಗಳಿಗೆ ನ.20ರಿಂದ 22ರವರೆಗೆ ಲಿಖಿತ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆ ಮಾಡಿಕೊಂಡಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ಯಾವ್ಯಾವ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ?
ಪ್ರಾಂಶುಪಾಲರ ಹಾಗೂ ಕಾರಾಗೃಹ ಹಾಗೂ ಕೆಇಎ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ನ.20ರಂದು ಕನ್ನಡ ಪರೀಕ್ಷೆ ನಡೆಯಲಿದೆ. ಪ್ರಾಂಶುಪಾಲರ ಹುದ್ದೆಗೆ ಬೆಳಗಿನ ಅವಧಿಯಲ್ಲಿ ಕನ್ನಡ ಪರೀಕ್ಷೆ ನಡೆದರೆ ಮಧ್ಯಾಹ್ನದ ನಂತರ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ಕನ್ನಡ ಪರೀಕ್ಷೆಯು ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಕೆಇಎ ಎಸ್ಡಿಎ ಪರೀಕ್ಷೆಗೆ 246 ಮಂದಿ ಅರ್ಜಿ
ಪ್ರಾಂಶುಪಾಲರ ಪರೀಕ್ಷೆಗೆ 2,850 ಮಂದಿ ಕಾರಾಗೃಹ ಮತ್ತು ಕೆಇಎ ಎಸ್ಡಿಎ ಪರೀಕ್ಷೆಗೆ 246 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು ಮತ್ತು ಕಲಬುರಗಿದಲ್ಲಿ ಪರೀಕ್ಷೆ ನಡೆಯಲಿದೆ. ಉಳಿಕೆ ಮೂಲ ವೃಂದಕ್ಕೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆಯ ವಿವಿಧ ಹುದ್ದೆಗಳಿಗೆ ನ.21ರಂದು ಸಾಮಾನ್ಯ ಜ್ಞಾನ ಪರೀಕ್ಷೆ ನಡೆಯಲಿದೆ. ಒಟ್ಟು 60,481 ಮಂದಿ ಅರ್ಜಿ ಸಲ್ಲಿಸಿದ್ದು, ಏಳು ಜಿಲ್ಲೆಗಳ 148 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.
ಪ್ರಾಂಶುಪಾಲರು, ಕಾರಾಗೃಹ, ಕೆಇಎ ಎಸ್ಡಿಎಗೆ ಕನ್ನಡ ಪರೀಕ್ಷೆ
ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ನ.22ರಂದು ಪರೀಕ್ಷೆ ನಡೆಯಲಿದ್ದು, 84,581 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅದೇ ದಿನ ಪಿಯು ಕಾಲೇಜಿನ ಪ್ರಾಂಶುಪಾಲರ ಹುದ್ದೆಯ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ. ಇದೇ ಹುದ್ದೆಗೆ ಡಿ.5ರಂದು ಪತ್ರಿಕೆ-3 ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.
ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ಇಡುವ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪರೀಕ್ಷಾ ಉಸ್ತುವಾರಿಗಳಾಗಿರುತ್ತಾರೆ ಎಂದು ಅವರು ವಿವರಿಸಿದ್ದಾರೆ.














