ನಾಳೆಯೂ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 26 ರಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ನಿರಂತರ ಮಳೆಯಿಂದ ಅಪಾಯ ಸಂಭವಿಸುವ ಸಾಧ್ಯತೆ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ.

ಕೊಡಗು (ಜೂ. 25): ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಗುರುವಾರ (ಜೂ. 26) ಎಲ್ಲಾ ಶಾಲಾ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿದೆ. ಹವಾಮಾನ ಇಲಾಖೆ ಕೊಡಗು ಜಿಲ್ಲೆಗೆ ನಾಳೆ ರೆಡ್ ಅಲರ್ಟ್ ಘೋಷಿಸಿರುವುದರಿಂದ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕೃತವಾಗಿ ತಿಳಿಸಲಾಗಿದೆ.

ಯಾವೆಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ?

ಜಿಲ್ಲಾಡಳಿತದ ಆದೇಶದ ಪ್ರಕಾರ, ನಾಳೆ ಕೊಡುಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳು ಸೇರಿ ಎಲ್ಲ ಶೈಕ್ಷಣಿಕ ಸಂಸ್ಥೆಗಳಿಗೆ ಗುರುವಾರ ಒಂದು ದಿನದ ರಜೆ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ, ನೀರಿನ ಹರಿವು, ಗುಡ್ಡ ಕುಸಿತ ಹಾಗೂ ರಸ್ತೆ ತಡೆಯಂತಹ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಪಾಯಗಳನ್ನು ತಪ್ಪಿಸಲು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ನೀಡಲಾಗಿದೆ.

ಜಿಲ್ಲಾಡಳಿತದ ಎಚ್ಚರಿಕೆ:

ಅಧಿಕೃತ ಪ್ರಕಟಣೆಯಲ್ಲಿ, ಪೋಷಕರು ಮತ್ತು ವಿದ್ಯಾರ್ಥಿಗಳು ಸ್ಥಳೀಯ ಹವಾಮಾನ ಮಾಹಿತಿ ಹಾಗೂ ಜಿಲ್ಲಾಡಳಿತದಿಂದ ನೀಡುವ ಸೂಚನೆಗಳಿಗೆ ಗಮನಹರಿಸಬೇಕು ಎಂದು ಕೇಳಿಕೊಳ್ಳಲಾಗಿದೆ. ತುರ್ತು ಸಂದರ್ಭಗಳಲ್ಲಿ ನಂಬಲರ್ಹ ಮಾಹಿತಿಗೆ ಮಾತ್ರ ಸ್ಪಂದಿಸುವಂತೆ ಜನತೆಗೆ ಸಲಹೆ ನೀಡಲಾಗಿದೆ.